Saturday, August 8, 2026
Homeಜಿಲ್ಲೆಉಡುಪಿ : ಪಡುಬಿದ್ರಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ.

ಉಡುಪಿ : ಪಡುಬಿದ್ರಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ.

ಉಡುಪಿ : ಪಡುಬಿದ್ರಿಯ ಮುದರಂಗಡಿ ಸೆಂಟ್‌ ಕ್ಸೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಕಾಂಗ್ರೆಸ್‌ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್‌ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ಭೇದಿಸಿದ್ದು, ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆ. 7ರಂದು ಸಂಜೆ 3.45ರ ಸುಮಾರಿಗೆ ಡೇವಿಡ್‌ ಡಿಸೋಜಾ ಅವರು ಮುದರಂಗಡಿಯ ಸೆಂಟ್‌ ಕ್ಸೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ‘ಪ್ರಿನ್ಸ್‌ ಎಂಟರ್‌ಪ್ರೈಸಸ್‌’ ಕಚೇರಿಗೆ ಬಂದಿದ್ದರು. ಬಳಿಕ ಥಾರ್‌ ವಾಹನದ ಚಾಲಕನ ಬದಿಯ ಬಾಗಿಲಿನ ಬಳಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಓರ್ವ ಪಿಸ್ತೂಲ್‌ನಿಂದ ಅವರ ತಲೆಗೆ ಗುಂಡು ಹಾರಿಸಿದ್ದ. ತೀವ್ರವಾಗಿ ಗಾಯಗೊಂಡಿದ್ದ ಡೇವಿಡ್‌ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.

ಈ ಸಂಬಂಧ ಶಿರ್ವ ಪೊಲೀಸ್‌ ಠಾಣೆಯಲ್ಲಿ ಕೊಲೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಬಸ್‌ನಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳು
ಪ್ರಕರಣದ ತನಿಖೆ ನಡೆಯುತ್ತಿದ್ದ ವೇಳೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಬೈಂದೂರಿನ ಒತ್ತಿನಾಣೆ ಬಳಿ ಬಸ್‌ ನಿಲ್ಲಿಸಿ ತಪಾಸಣೆ ನಡೆಸಿದಾಗ ಮೂವರು ಆರೋಪಿಗಳು ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳ ಪೈಕಿ ರಾಜು (42), ಉತ್ತರ ಪ್ರದೇಶದ ಥಾಣಾ ಪಿಲ್ವ ನಿವಾಸಿ, ಕಾಪು ಪೊಲೀಸ್‌ ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ ಹಾಕಿ, ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದ್ದು, ರಾಜುವಿನ ಕಾಲಿಗೆ ಗುಂಡು ತಗುಲಿದೆ. ಬಳಿಕ ಆತನನ್ನು ಹಾಗೂ ಪಿಸ್ತೂಲ್‌ನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜು ವಿರುದ್ಧ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣವೂ ದಾಖಲಾಗಿದೆ.
ಕುಮಟಾ, ಭಟ್ಕಳದಲ್ಲಿ ಇಬ್ಬರ ಬಂಧನ
ಪರಾರಿಯಾಗಿದ್ದ ಮತ್ತಿಬ್ಬರು ಆರೋಪಿಗಳಾದ ಅಜಯ್‌ ರಸ್ತೋಗಿ ಅಲಿಯಾಸ್‌ ಅನ್ಮೋಲ್‌ (23), ಉತ್ತರಾಖಂಡ ಅವರನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಹಾಗೂ ಜಿಯಾಹುಲ್‌ ವಜೂಲ್‌ ಶೇಖ್‌ ಅಲಿಯಾಸ್‌ ದೀಪಕ್‌ (38), ಬಿಹಾರ ಅವರನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಶನಿವಾರ ಬೆಳಗ್ಗೆ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆಯಲ್ಲಿ ಕಾಪು ಪಿಎಸ್‌ಐ ತೇಜಸ್ವಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಆರೋಪಿ ರಾಜು ಕೂಡ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸುಪಾರಿ ಹತ್ಯೆ ಶಂಕೆ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಡೇವಿಡ್‌ ಡಿಸೋಜಾ ಅವರು ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯರಾಜ್ಯದ ಕಂಪನಿಯೊಂದರೊಂದಿಗೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ ಕಾರಣಕ್ಕೆ ಡೇವಿಡ್‌ ಅವರನ್ನು ಹತ್ಯೆ ಮಾಡಲು ಸುಪಾರಿ ನೀಡಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೆ ಸಹಕರಿಸಿದವರು, ಹಣಕಾಸಿನ ನೆರವು ನೀಡಿದವರು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದವರ ಪತ್ತೆಗೆ ತನಿಖೆ ಮುಂದುವರಿದಿದೆ.
ಕೃತ್ಯಕ್ಕೆ ಬಳಸಿದ್ದ ಬೈಕ್‌ನ್ನು ಆರೋಪಿಗಳು ಎರ್ಮಾಳ್‌ನಲ್ಲಿ ಬಿಟ್ಟು ಹೋಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ತಂಡಗಳಿಂದ ಕಾರ್ಯಾಚರಣೆ
ಉಡುಪಿ ಜಿಲ್ಲಾ ಪೊಲೀಸ್‌ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಕಾಪು ವೃತ್ತ ನಿರೀಕ್ಷಕ ಅಝ್ಮತ್‌ ಆಲಿ ಜಿ., ಡಿಎಸ್‌ಬಿ ವಿಭಾಗದ ಪಿಐ ಹರೀಶ್‌, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್‌, ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ್‌ ಕಾಯ್ಕಿಣಿ ಸೇರಿದಂತೆ ವಿವಿಧ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬೈಂದೂರು, ಕಾಪು, ಶಿರ್ವ, ಕೊಲ್ಲೂರು, ಕಾರ್ಕಳ ಗ್ರಾಮಾಂತರ ಹಾಗೂ ಪಡುಬಿದ್ರಿ ಠಾಣೆಗಳ ಪೊಲೀಸರು, ಭಟ್ಕಳ ಮತ್ತು ಕುಮಟಾ ಪೊಲೀಸರು, ಜಿಲ್ಲಾ ಅಪರಾಧ ಪರಿಶೀಲನಾಧಿಕಾರಿ, ಬೆರಳಚ್ಚು, ಶ್ವಾನದಳ ಹಾಗೂ ಸಿಡಿಆರ್‌ ಸೆಲ್‌ ತಂಡಗಳು ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular