Wednesday, December 11, 2024
Flats for sale
Homeಜಿಲ್ಲೆಕಾರವಾರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ನೀರುಪಾಲು ಪ್ರಕರಣ : 6...

ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ನೀರುಪಾಲು ಪ್ರಕರಣ : 6 ಶಿಕ್ಷಕರ ಅಮಾನತು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ..!

ಕಾರವಾರ : ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಡಿಸೆಂಬರ್ 10 ರಂದು ನಡೆದಿತ್ತು. ಕೋಲಾರದ ವಸತಿ ಶಾಲೆಯ ಒಂಬತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ನಿನ್ನೆಯೇ ಓರ್ವ ವಿದ್ಯಾರ್ಥಿನಿ ಶ್ರವಂತಿ ಮೃತದೇಹವನ್ನು ಹೊರತೆಗೆಯಲಾಗಿತ್ತು. ಇಂದು ಜೀವರಕ್ಷಕರು, ಗೃಹ ರಕ್ಷಕರು, ಮೀನುಗಾರರು ಮತ್ತು ಪೊಲೀಸರನ್ನು ಒಳಗೊಂಡ ತಂಡ ಶೋಧ ಕಾರ್ಯಾಚರಣೆ ನಡೆಸಿದ್ದು ಬೆಳಿಗ್ಗೆ ಮೂವರು ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಮೃತ ವಿದ್ಯಾರ್ಥಿನಿಯರನ್ನು 15 ವರ್ಷದ ಶ್ರವಂತಿ, ದೀಕ್ಷಾ, ಲಾವಣ್ಯ ಮತ್ತು ಲಿಪಿಕಾ ಎಂದು ಗುರುತಿಸಲಾಗಿದೆ.

ಜೀವರಕ್ಷಕರ ಎಚ್ಚರಿಕೆಯ ಹೊರತಾಗಿಯೂ, ಏಳು ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ಜೀವರಕ್ಷಕರು ಮತ್ತು ಇತರ ಏಜೆನ್ಸಿಗಳ ಸಹಾಯದಿಂದ ರಕ್ಷಿಸಲಾಗಿತ್ತು. ಆದರೆ ನಾಲ್ವರು ಸಮುದ್ರ ಪಾಲಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 ನಿರ್ಲಕ್ಷ್ಯದಿಂದ ಸಾವಿಗೆ ಕಾರಣ ಪ್ರಕರಣವನ್ನು ದಾಖಲಿಸಲಾಗಿದ್ದು ಎಲ್ಲಾ ಆರು ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ತಿಳಿಸಿದ್ದಾರೆ.

ಈ ಘಟನೆಯ ಹಿನ್ನೆಲೆ ಎಲ್ಲಾ ಆರು ಶಿಕ್ಷಕರನ್ನು ಬಂಧಿಸಲಾಗಿದ್ದು ನಂತರ ಶಿಕ್ಷಕರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದಿದೆ. ಈ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular