ಕೊಡಗು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 16 ವರ್ಷದ ಬಾಲಕಿ ಮೀನಾಳ ರುಂಡ ಕಡಿದು ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿ ಪ್ರಕಾಶ್ಗೆ ನ್ಯಾಯಾಲಯ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ಮಡಿಕೇರಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಈ ತೀರ್ಪು ನೀಡಿದೆ.
ಪ್ರಕರಣದ ಪ್ರಮುಖ ಅಂಶಗಳು:
- 2024ರ ಮೇ 9ರಂದು ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ಕುಂಬಾರಗಡಿಗೆಯಲ್ಲಿ ಭೀಕರ ಹತ್ಯೆ ನಡೆದಿತ್ತು.
- 16 ವರ್ಷದ ಬಾಲಕಿ ಮೀನಾ ಕೊಲೆಯಾದ ದುರ್ದೈವಿ.
- 32 ವರ್ಷದ ಪ್ರಕಾಶ್ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪ ಎದುರಿಸುತ್ತಿದ್ದ.
- ಬಾಲಕಿಯ ರುಂಡವನ್ನು ದೇಹದಿಂದ ಬೇರ್ಪಡಿಸಿ ಸುಮಾರು 100 ಮೀಟರ್ ದೂರದಲ್ಲಿ ಎಸೆದಿದ್ದ.
- ಪ್ರಕರಣದ ವಿಚಾರಣೆ ನಡೆಸಿದ ಮಡಿಕೇರಿಯ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇದೀಗ ಮರಣದಂಡನೆ ವಿಧಿಸಿದೆ.
ಪ್ರಕರಣದ ಹಿನ್ನೆಲೆ ಏನು?
ಮೀನಾಳನ್ನು ಪ್ರೀತಿಸುತ್ತಿದ್ದ ಪ್ರಕಾಶ್, ಆಕೆಗೆ 18 ವರ್ಷ ತುಂಬುವ ಮೊದಲೇ ಮನೆಯವರ ಒಪ್ಪಿಗೆ ಪಡೆದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಎನ್ನಲಾಗಿದೆ.
ಈ ವಿಚಾರ ಮಕ್ಕಳ ಕಲ್ಯಾಣ ಅಧಿಕಾರಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಬಾಲಕಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದರು.
ಇದರಿಂದ ಆಕ್ರೋಶಗೊಂಡ ಪ್ರಕಾಶ್, ಮೀನಾಳ ಮನೆಗೆ ತೆರಳಿ ಆಕೆಯ ಪೋಷಕರ ಮೇಲೆ ಹಲ್ಲೆ ನಡೆಸಿದ್ದ. ಮೀನಾಳ ತಾಯಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ಮೀನಾಳನ್ನು ಮನೆಯಿಂದ ಹೊರಗೆ ಎಳೆದು ಬರ್ಬರವಾಗಿ ಹತ್ಯೆಗೈದಿದ್ದ.
ಪೊಲೀಸ್ ತನಿಖೆ:
ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ಮಡಿಕೇರಿಯಲ್ಲಿ ಆರೋಪಿ ಪ್ರಕಾಶ್ನನ್ನು ಬಂಧಿಸಲಾಗಿತ್ತು.
ಪ್ರಕರಣದಲ್ಲಿ ಐಪಿಸಿ ವಿವಿಧ ಸೆಕ್ಷನ್ಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅಪ್ರಾಪ್ತ ಬಾಲಕಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮರಣದಂಡನೆ ವಿಧಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

