ಬೆಂಗಳೂರು : ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಪ್ರದೀಪ್ ಈಶ್ವರ್ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಈ ಕ್ರಮ ಕೈಗೊಂಡಿದೆ.
ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸುತ್ತಿದ್ದು, ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ನಿಗದಿಪಡಿಸಿದ್ದಾರೆ.

