ಭೂಪಾಲ್: ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 80 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ ಹಲವಾರು ವ್ಯಕ್ತಿಗಳು ಆವರಣದಲ್ಲಿ ಸಿಕ್ಕಿಬಿದ್ದಿರುವ ವಾತಾವರಣ ಇದ್ದು ತೆರವು ಪ್ರಯತ್ನಗಳನ್ನು ನಡೆಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿಯ ಕೆನ್ನಾಲಗೆ ಕಾರ್ಖಾನೆ ಒಳಗೆ ಹಾಗೂ ಹೊರಗೆ ವ್ಯಾಪಿಸಿದ್ದು, ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.


