ಮಂಗಳೂರು : ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡುತ್ತಿದೆ. ಅನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಭಾಷಣ ಮಾಡಿದರು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ದಕ್ಷಿಣ ಕನ್ನಡ ಸೇರಿದಂತೆ ಐದು ಜಿಲ್ಲೆಗಳಲ್ಲಿ ಪ್ರವಾಹ ಪರಿಹಾರ ಮತ್ತು ಭೂಕುಸಿತ ತಡೆಗೆ 721 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು. ಪಿಪಿಪಿ ಮಾದರಿಯಲ್ಲಿ ಸಸಿಹಿತ್ಲು ಬೀಚ್ ಅನ್ನು ಸರ್ಫಿಂಗ್ ಸ್ಪಾಟ್ ಆಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೀಚ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಅವರು ಹೇಳಿದರು. ಧರ್ಮಸ್ಥಳದಲ್ಲಿ ಮಿನಿ ಏರ್ಸ್ಟ್ರಿಪ್ ಮಾಡುವ ಯೋಜನೆಯು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.


