ಮಂಗಳೂರು : ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ನಗರದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಮೂಲಕ ಅವರ ವಿರುದ್ಧ ಎರಡನೇ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನ ಮೇಲೆ 2026ರ ಮೇ 13ರಂದು ಲೈಂಗಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಡಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 50/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಈ ಹಿಂದೆಯೂ ಪ್ರಕರಣ ದಾಖಲಾಗಿತ್ತು
ಇದೇ ಧರ್ಮಗುರುಗಳ ವಿರುದ್ಧ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 2026ರ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯು ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಎರಡನೇ ಪ್ರಕರಣದ ತನಿಖೆ ಎಸಿಪಿಗೆ
ಇದೀಗ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಪ್ರಕರಣದ ಮುಂದಿನ ತನಿಖೆಯ ಜವಾಬ್ದಾರಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ ಅವರಿಗೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎರಡೂ ಪ್ರಕರಣಗಳು ತನಿಖಾ ಹಂತದಲ್ಲಿದ್ದು, ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.

