ಮಂಗಳೂರು : ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು “ಸಮಾಧಾನ ಸಮಾರೋಹ್-2026” ಹೆಸರಿನಲ್ಲಿ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 21, 22 ಮತ್ತು 23, 2026ರಂದು ಈ ವಿಶೇಷ ಲೋಕ ಅದಾಲತ್ ನಡೆಯಲಿದ್ದು, ಜಿಲ್ಲೆಯ ಜನತೆಗೆ ತಮ್ಮ ಸ್ಥಳದಲ್ಲಿಯೇ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದರು.
ನ್ಯಾಯಾಧೀಶರು, ವಕೀಲರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಈಗಾಗಲೇ ಹಲವು ಸಭೆಗಳು ನಡೆದಿದ್ದು, ಪರಸ್ಪರ ಒಪ್ಪಿಗೆಯ ಆಧಾರದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಸಂಧಾನಕಾರರು ಭಾಗವಹಿಸಿ ಪ್ರಕರಣ ವಿಲೇವಾರಿ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಧ್ಯಸ್ಥಿಕೆ ವ್ಯವಸ್ಥೆ
ಕಾನೂನು ಸೇವಾ ಸಮಿತಿ ವ್ಯಾಪ್ತಿಯಲ್ಲಿರುವ ಪ್ರಕರಣಗಳಿಗೆ ನೋಟಿಸ್ ಜಾರಿ ಮಾಡಿ, ಸೂಕ್ತ ಮಧ್ಯಸ್ಥಿಕೆದಾರರನ್ನು ನೇಮಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ಪ್ರಕರಣಗಳ ಕುರಿತು ಯಾವುದೇ ಅನುಮಾನಗಳಿದ್ದಲ್ಲಿ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣಗಳಿಗೆ ವಿಶೇಷ ಲೋಕ ಅದಾಲತ್
ದೇಶಾದ್ಯಂತ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ, ಎನ್.ಐ. ಆಕ್ಟ್ ಕಲಂ 138ರಡಿ ದಾಖಲಾಗಿರುವ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ ಅದಾಲತ್‌ಗಳನ್ನು ಜುಲೈ 18, 2026 ಮತ್ತು ನವೆಂಬರ್ 21, 2026ರಂದು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 55,335 ಚೆಕ್ ಬೌನ್ಸ್ ಪ್ರಕರಣಗಳು ಬಾಕಿ ಇದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸುಮಾರು 13,357 ಪ್ರಕರಣಗಳು ಉಳಿದಿವೆ ಎಂದು ಬಸವರಾಜ ಮಾಹಿತಿ ನೀಡಿದರು. ರಾಜೀ ಸಂಧಾನದ ಮೂಲಕ ಈ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಜುನ್ನೀಸಾರವರು ಉಪಸ್ಥಿತರಿದ್ದರು.


