ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ.
ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. 2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಆರೋಪದಡಿ ಉಮರ್ ಫಾರೂಕ್ನನ್ನು ಪ್ರಕರಣದ 13ನೇ ಆರೋಪಿಯಾಗಿ ಗುರುತಿಸಲಾಗಿತ್ತು. ಪ್ರಕರಣದಲ್ಲಿ ಇದುವರೆಗೆ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್ಐಎ ತಲಾ ₹2 ಲಕ್ಷ ಬಹುಮಾನ ಘೋಷಿಸಿತ್ತು. ಇತ್ತೀಚೆಗೆ ಜುಲೈ 11ರಂದು ನೌಷದ್ ಹಾಗೂ ನಾಸೀರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಎನ್ಐಎ, ಅವರ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದಲ್ಲಿ ಕೊಚ್ಚಿಯಲ್ಲಿ ಅಡಗಿ ಕುಳಿತಿದ್ದ ಉಮರ್ ಫಾರೂಕ್ನನ್ನು ವಶಕ್ಕೆ ಪಡೆದಿದೆ.
ಬಂಧಿತ ಉಮರ್ ಫಾರೂಕ್ ಕಳೆದ ಎರಡು ವರ್ಷಗಳಿಂದ ಕೊಚ್ಚಿಯಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣದ ಕುರಿತು ಎನ್ಐಎ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

