ಮಂಗಳೂರು : ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ.




ಫೆಂಗಲ್ ಚಂಡಮಾರುತದ ಪ್ರಭಾವ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿಗೂ ವಿಸ್ತರಣೆ ಯಾಗಿದೆ. ಇದರಿಂದ ಎಂಟು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುತ್ತಿದೆ.
ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಹಲವೆಡೆ ಕೃತಕ ನೆರೆಯುಂಟಾಗಿ ರಸ್ತೆ ಮನೆ ಮಠಗಳು ನೀರಿನಲ್ಲಿ ಮುಳುಗಿವೆ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಂಗಳವಾರವೂ ಕೂಡಾ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬುಧವಾರ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದು,ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಮಿಂಚು ಇದೆ ಎಂದು ಇಲಾಖೆ ತಿಳಿಸಿದೆ. ಶುಕ್ರವಾರದವರೆಗೆ ಅಲ್ಲಲ್ಲಿ ತುಂತುರು ಇಲ್ಲವೇ ಸಾಧಾ ರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ ಎಂದು ಈ ವೇಳೆ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಸಚಿವರಿಗೆ ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯೆಲ್ಲ ಸಾಧಾರಣ ಮಳೆ ಸುರಿದಿರುವುದರಿಂದ ಎರಡೂ ಜಿಲ್ಲೆಗಳ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದಲ್ಲದೆ ರಾಷ್ಟ್ರೀಯ ಹೆದ್ದಾರಿಯನ್ನೂ ಜಲಾವೃತಗೊಳಿಸಿದೆ. ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಹಾಲಾಡಿ, ಹೆಬ್ರಿ, ಕಾರ್ಕಳ, ಕೋಟ, ಸಾಲಿಗ್ರಾಮ, ಉಪ್ಪೂರು, ಬ್ರಹ್ಮಾವರ, ಹಿರಿಯಡ್ಕ, ಕಾಪು, ಕಟಪಾಡಿ, ಪಡುಬಿದ್ರಿ, ಮಚ್ಚಾಕಲ್ ಭಾಗದಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಬಹುತೇಕ ಎಲ್ಲಾ ಮೀನುಗಾರಿಕಾ ದೋಣಿಗಳು ಮಲ್ಪೆ ಮೀನುಗಾರಿಕಾ ಬಂದರಿಗೆ ಬಂದಿಳಿದಿವೆ.