Tuesday, October 13, 2026
Homeಜಿಲ್ಲೆಮಂಗಳೂರು : ವಿದ್ಯಾರ್ಥಿಗಳ ಮೇಲೆ ಪೊಲೀಸರ ದರ್ಪವೇ ? ಕಾಂಗ್ರೆಸ್ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರಾ ಖಾಕಿಧಾರಿಗಳು ?...

ಮಂಗಳೂರು : ವಿದ್ಯಾರ್ಥಿಗಳ ಮೇಲೆ ಪೊಲೀಸರ ದರ್ಪವೇ ? ಕಾಂಗ್ರೆಸ್ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರಾ ಖಾಕಿಧಾರಿಗಳು ? ಶಾಸಕ ವೇದವ್ಯಾಸ್ ಕಾಮತ್ ಕಿಡಿ..!

ಮಂಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿದ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆದುಕೊಂಡ ರೀತಿಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ವಿದ್ಯಾರ್ಥಿಗಳು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುವುದು ಮಹಾಪರಾಧವೇ ಎಂದು ಪ್ರಶ್ನಿಸಿರುವ ಅವರು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪರೀಕ್ಷೆ ಮುಂದೂಡಲು ಮನವಿ ಮಾಡಿದ್ದೆವು

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೆ ಎಂದು ಕಾಮತ್ ತಿಳಿಸಿದ್ದಾರೆ.

ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 140ಕ್ಕೂ ಹೆಚ್ಚು ಕಾಲೇಜುಗಳ ಡಿಸೆಂಬರ್ 26ರ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅದೇ ಮಾದರಿಯಲ್ಲಿ ದಸರಾ ಹಬ್ಬದ ಮರುದಿನದ ಪರೀಕ್ಷೆಯನ್ನೂ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ವಿದ್ಯಾರ್ಥಿಗಳ ಪೋಷಕರಿಂದ ಕರೆ ಬಂದ ಹಿನ್ನೆಲೆಯಲ್ಲಿ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಧ್ಯಸ್ಥಿಕೆ ವಹಿಸಿದ್ದಾಗಿ ಅವರು ಹೇಳಿದ್ದಾರೆ.

ಪೊಲೀಸರ ವರ್ತನೆಗೆ ಆಕ್ಷೇಪ

ಕಾಲೇಜು ಆಡಳಿತಕ್ಕೆ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಕುತ್ತಿಗೆಪಟ್ಟಿ ಹಿಡಿದು ಎಳೆದೊಯ್ದಿದ್ದಾರೆ ಹಾಗೂ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಕಾಮತ್ ಮಾಡಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಹಿಳಾ ಪೊಲೀಸರ ಬದಲು ಪುರುಷ ಪೊಲೀಸರನ್ನು ಬಳಸಿಕೊಂಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ವಿಷಯ ತಿಳಿದ ಬಳಿಕ ಪೊಲೀಸ್ ಠಾಣೆಗೆ ತೆರಳಿ ಅವರ ಮನವಿಯನ್ನು ಸಲ್ಲಿಸಲು ಅವಕಾಶ ನೀಡುವಂತೆ ಕೇಳಿಕೊಂಡು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಕೈವಾಡದ ಅನುಮಾನ

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪದ ಹಿಂದೆ ಕಾಂಗ್ರೆಸ್ ನಾಯಕರೊಬ್ಬರ ಪ್ರಭಾವ ಇರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕಾಮತ್ ಹೇಳಿದ್ದಾರೆ. ಈ ಸಂಬಂಧ ಖಾದರ್ ಅವರೇ ಅಥವಾ ಐವನ್ ಅವರೇ ಎಂದು ಪ್ರಶ್ನಿಸಿರುವ ಅವರು, ಪೊಲೀಸರು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸಬಾರದು ಎಂದು ಟೀಕಿಸಿದ್ದಾರೆ.

ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿಲ್ಲ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿಲ್ಲ ಎಂದು ಹೇಳಿರುವ ಅವರು, ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಲು ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಹಬ್ಬದ ದಿನಗಳಲ್ಲಿ ಪರೀಕ್ಷೆ ಬೇಡ

ನಾಗರ ಪಂಚಮಿ, ಅಷ್ಟಮಿ, ದಸರಾ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆಗಳನ್ನು ಆಯೋಜಿಸಬಾರದು. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಕಾಮತ್ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳ ಪರವಾಗಿ ಎಬಿವಿಪಿ ನಡೆಸುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ತಪ್ಪಿತಸ್ಥ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ವೇಳೆ ರಮೇಶ್ ಕಂಡೆಟ್ಟು, ನಂದನ್ ಮಲ್ಯ, ಅಶ್ವಿತ್ ಕೊಟ್ಟಾರಿ, ಮನೋಹರ್ ಕದ್ರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular