ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಡೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲಿನಲ್ಲಿ ನಡೆದಿದೆ.
ಇಳಿಜಾರು ರಸ್ತೆಯಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಾಗುತ್ತಿದ್ದ ವೇಳೆ ಬಸ್ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ವೇಗವಾಗಿ ಕೆಳಭಾಗಕ್ಕೆ ಚಲಿಸಿದ ಬಸ್ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ವೇಳೆ ಬಸ್ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಆದರೆ ಅದೃಷ್ಟವಶಾತ್ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

