Saturday, November 21, 2026
Homeಜಿಲ್ಲೆಮಂಗಳೂರು : ಸಹಕಾರಿ ಕ್ಷೇತ್ರಕ್ಕೆ ಜನರ ವಿಶ್ವಾಸವೇ ಅತಿದೊಡ್ಡ ಬಲ: ಸಚಿವ ಲಕ್ಷ್ಮಣ ಸವದಿ.

ಮಂಗಳೂರು : ಸಹಕಾರಿ ಕ್ಷೇತ್ರಕ್ಕೆ ಜನರ ವಿಶ್ವಾಸವೇ ಅತಿದೊಡ್ಡ ಬಲ: ಸಚಿವ ಲಕ್ಷ್ಮಣ ಸವದಿ.

ಮಂಗಳೂರು : ಸಹಕಾರಿ ಕ್ಷೇತ್ರದ ಮೇಲೆ ಜನರು ಇಟ್ಟಿರುವ ವಿಶ್ವಾಸವೇ ಈ ರಂಗದ ಬಹುದೊಡ್ಡ ಶಕ್ತಿಯಾಗಿದೆ. ರಾಜ್ಯದಲ್ಲಿ ಸುಮಾರು 2.60 ಕೋಟಿ ಮಂದಿ ಸಹಕಾರಿ ಸಂಘಗಳ ಸದಸ್ಯರಾಗಿದ್ದು, ಜನರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದಲ್ಲಿ ಸಹಕಾರಿ ಕ್ಷೇತ್ರ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಕೊಡುಗೆ ಅಪಾರವಾಗಿದೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಲಕ್ಷಾಂತರ ಮಹಿಳೆಯರ ಬದುಕಿನಲ್ಲಿ ಬೆಳಕು ಮೂಡಿಸಿರುವ ಅವರ ಸೇವೆ ಶ್ಲಾಘನೀಯ. ಮಹಿಳಾ ಸಬಲೀಕರಣ ಹಾಗೂ ರೈತರ ಆರ್ಥಿಕ ಪ್ರಗತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹತ್ವದ ಕೊಡುಗೆ ನೀಡಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದೆ. ಸಹಕಾರಿ ಕ್ಷೇತ್ರದ ಮೂಲಕ ಕೃಷಿಕರ ಬದುಕಿನಲ್ಲಿ ಆರ್ಥಿಕ ಬದಲಾವಣೆ ಸಾಧ್ಯವಾಗಿದೆ. ರಾಜ್ಯದ ಸಕ್ಕರೆ ಕಾರ್ಖಾನೆಗಳ ಬೆಳವಣಿಗೆಯಲ್ಲಿಯೂ ಸಹಕಾರಿ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

₹1 ಕೋಟಿ ವೈಯಕ್ತಿಕ ನೆರವು ಘೋಷಿಸಿದ ರಾಜೇಂದ್ರ ಕುಮಾರ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರಿ ಸಂಘಗಳ ಚಟುವಟಿಕೆಗಳಲ್ಲಿ ಜನರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿದ್ದು, ಅದರಲ್ಲೂ ಮಹಿಳೆಯರ ಭಾಗವಹಿಸುವಿಕೆ ಗಮನಾರ್ಹವಾಗಿ ವೃದ್ಧಿಸಿದೆ ಎಂದರು.

ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ತಮ್ಮ ವೈಯಕ್ತಿಕ ನೆಲೆಯಲ್ಲಿ ₹1 ಕೋಟಿ ಆರ್ಥಿಕ ಸಹಾಯ ನೀಡುವುದಾಗಿ ಘೋಷಿಸಿದರು.

ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಸಹಕಾರಿ ಕ್ಷೇತ್ರದ ಕೊಡುಗೆ: ಯು.ಟಿ. ಖಾದರ್

ಸಚಿವ ಯು.ಟಿ. ಖಾದರ್ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲಕ ಜನರಲ್ಲಿ ಆರ್ಥಿಕ ಸ್ವಾವಲಂಬನೆ ಬೆಳೆಸುವುದರ ಜತೆಗೆ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಗ್ರಾಮೀಣ ಜನರಿಗೆ ಆರ್ಥಿಕ ಶಕ್ತಿ ತುಂಬಿರುವ ಸಹಕಾರಿ ರಂಗ ರೈತರು ಮತ್ತು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರು ಸಹಕಾರಿ ಕ್ಷೇತ್ರದ ಸಾಧನೆಗಳನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಸಹಕಾರ ಮಾಣಿಕ್ಯ ಪ್ರಶಸ್ತಿ’, ಉತ್ತಮ ಸಹಕಾರ ಸಂಘಗಳಿಗೆ ಹಾಗೂ ಉತ್ತಮ ಸ್ವಸಹಾಯ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರಿ ಕ್ಷೇತ್ರದ ಪ್ರಮುಖರು, ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಹಕಾರಿ ಕ್ಷೇತ್ರದ ಒಗ್ಗಟ್ಟು, ಮಹಿಳಾ ಸಬಲೀಕರಣ, ರೈತರ ಆರ್ಥಿಕ ಪ್ರಗತಿ ಮತ್ತು ಗ್ರಾಮೀಣಾಭಿವೃದ್ಧಿಯ ಸಂಕಲ್ಪದೊಂದಿಗೆ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು.

ವೇದಿಕೆಯಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಬ್ರಿಜೇಶ್ ಚೌಟ, ವೇದವ್ಯಾಸ್ ಕಾಮತ್, ಯಶಪಾಲ್ ಸುವರ್ಣ, ಇವನ್ ಡಿಸೋಜಾ,ದೇವಿಪ್ರಸಾದ್ ಶೆಟ್ಟಿ, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular