Tuesday, October 13, 2026
Homeಜಿಲ್ಲೆಮಂಗಳೂರು : ಸೇಂಟ್ ಆಗ್ನೆಸ್ ಕಾಲೇಜು ವಿವಾದಕ್ಕೆ ಜಿಲ್ಲಾಡಳಿತವೇ ಹೊಣೆ : ಶಾಸಕ ಡಾ. ಭರತ್...

ಮಂಗಳೂರು : ಸೇಂಟ್ ಆಗ್ನೆಸ್ ಕಾಲೇಜು ವಿವಾದಕ್ಕೆ ಜಿಲ್ಲಾಡಳಿತವೇ ಹೊಣೆ : ಶಾಸಕ ಡಾ. ಭರತ್ ಶೆಟ್ಟಿ ವಾಗ್ದಾಳಿ..!

ಮಂಗಳೂರು : ನಗರದ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದ ವಿವಾದ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ., ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿರ್ವಹಿಸುವಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ ಎಂದು ಆರೋಪಿಸಿದ್ದಾರೆ.

ದಸರಾ ರಜೆ ಸಂದರ್ಭದಲ್ಲಿ ಪರೀಕ್ಷೆ ನಡೆಸದಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ಅವರು ದೂರಿದ್ದಾರೆ. ಪರೀಕ್ಷೆ ನಡೆಸುವ ನಿರ್ಧಾರವನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದಾರೆ ಎಂಬ ಆರೋಪವನ್ನೂ ಅವರು ಮುಂದಿಟ್ಟಿದ್ದಾರೆ.

ವಿದ್ಯಾರ್ಥಿಗಳ ಅಹವಾಲು ಆಲಿಸುವ ಬದಲು ಅವರನ್ನು ಎಳೆದಾಡಲಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಿರಲಿಲ್ಲ ಎಂದು ಭರತ್ ಶೆಟ್ಟಿ ಟೀಕಿಸಿದ್ದಾರೆ. ಮಹಿಳಾ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸದಿರುವುದು ಗಂಭೀರ ಲೋಪ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪುರುಷ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರ ಮೇಲೆ ಕೈಹಾಕಿದ್ದಾರೆ ಎಂಬ ಆರೋಪದ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ ಅವರು, ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

ಕಾಲೇಜು ಆಡಳಿತ ಮಂಡಳಿಗೆ ಮನವಿ ಸಲ್ಲಿಸಲು ತೆರಳಿದ್ದ ಎಬಿವಿಪಿ ವಿದ್ಯಾರ್ಥಿಗಳಿಗೂ ತೊಂದರೆ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕುವ ಪ್ರಯತ್ನ ಸರಿಯಲ್ಲ ಎಂದಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ ನಿಯಂತ್ರಿಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಇಂತಹ ವಿವಾದಗಳು ಮುನ್ನೆಲೆಗೆ ಬರುತ್ತಿವೆ ಎಂದು ಟೀಕಿಸಿದ ಭರತ್ ಶೆಟ್ಟಿ, ಜಿಲ್ಲೆಯ ಅಭಿವೃದ್ಧಿ ಕುರಿತು ಜನರು ಪ್ರಶ್ನಿಸಿದಾಗ ಬೇರೆ ವಿಚಾರಗಳತ್ತ ಗಮನ ಸೆಳೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಹಕ್ಕುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ದ್ವಂದ್ವ ನಿಲುವು ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ಸೇಂಟ್ ಆಗ್ನೆಸ್ ಕಾಲೇಜು ವಿವಾದಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular