ಮಂಗಳೂರು : ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಬೇಕು ಎಂಬ ಒಲವು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ. ಈ ಕುರಿತು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯೂರಿನಲ್ಲಿ ಬಿಜೆಪಿ ಈ ಹಿಂದೆ ಒಂದು ಬಾರಿ ಗೆಲುವು ಸಾಧಿಸಿದ್ದು, ಮತ್ತೊಂದು ಬಾರಿ ಎರಡನೇ ಸ್ಥಾನ ಪಡೆದಿದೆ. ಹೀಗಾಗಿ ನ್ಯಾಯಯುತವಾಗಿ ಕ್ಷೇತ್ರದ ಮೇಲೆ ನಮ್ಮ ಹಕ್ಕು ಮಂಡಿಸುತ್ತೇವೆ. ಆದರೆ ಜೆಡಿಎಸ್ ನಮ್ಮ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ ಯಾವುದೇ ರೀತಿಯ ಜಗಳಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ರಾಷ್ಟ್ರೀಯ ನಾಯಕರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವಂತೆ ಸೂಚಿಸಿದರೆ ಅದಕ್ಕೆ ಬದ್ಧರಾಗುತ್ತೇವೆ. ಬಿಜೆಪಿ ಸ್ಪರ್ಧಿಸಿದರೂ ಜೆಡಿಎಸ್ ಜೊತೆ ಸಮನ್ವಯ ಸಾಧಿಸಿ ಗೆಲುವು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಹಣ ವಸೂಲಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಮತ್ತೊಂದೆಡೆ ಜನರಿಂದ ಹಣ ವಸೂಲಿ ಮಾಡುತ್ತಿದೆ ಎಂದು ಆರ್.ಅಶೋಕ್ ಆರೋಪಿಸಿದರು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದ ಬಳಿಕ ಅವರ ಪತ್ತೆಯೇ ಇಲ್ಲ ಎಂದು ಟೀಕಿಸಿದರು.
ಇದು ಕರುಣೆ ಇಲ್ಲದ, ಮೋಸದ ಮತ್ತು ದ್ರೋಹದ ಕಾಂಗ್ರೆಸ್ ಸರ್ಕಾರ. ಆಶಾ ಕಾರ್ಯಕರ್ತೆಯರ ನೋವು ಸರ್ಕಾರಕ್ಕೆ ಕೇಳಿಸುತ್ತಿಲ್ಲ. ಸರ್ಕಾರಕ್ಕೆ ಕಣ್ಣು ಮತ್ತು ಹೃದಯ ಎರಡೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ
ಮುಂಬರುವ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪಕ್ಷದ ಅಧ್ಯಕ್ಷರು ಹಾಗೂ ಸಂಸದರು ಗೆಲುವು ಸಾಧಿಸುವ ವಿಶ್ವಾಸವಿದೆ. ಹಿಂದಿನ ಚುನಾವಣೆಯಲ್ಲಿ ಪಕ್ಷದೊಳಗಿನ ಸಮನ್ವಯದ ಕೊರತೆಯಿಂದ ಹಿನ್ನಡೆಯಾಗಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸುವುದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಮೂಲೆಗುಂಪು ; ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಬಹುದು!
ರಾಜ್ಯ ಕಾಂಗ್ರೆಸ್ನಲ್ಲಿನ ಆಂತರಿಕ ಸಂಘರ್ಷದ ಕುರಿತು ಮಾತನಾಡಿದ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನವರೇ ಸಿ.ಡಿ. ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂಬುದನ್ನು ಅವರ ಪುತ್ರನೇ ಹೇಳಿಕೊಂಡು ಬರುತ್ತಿದ್ದಾರೆ ಎಂದು ಆರೋಪಿಸಿದರು.
ಸ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕ್ಲೀನ್ಚಿಟ್ ನೀಡಲೆಂದೇ ಎಸ್ಐಟಿ ರಚಿಸಲಾಗಿದೆ. ತನಿಖೆಯ ಬಳಿಕ ಎಲ್ಲರಿಗೂ ಕ್ಲೀನ್ಚಿಟ್ ಸಿಗಲಿದೆ ಎಂದು ಅವರು ಆರೋಪಿಸಿದರು.
ಸಿದ್ದರಾಮಯ್ಯ ಇದೀಗ ಮೂಲೆಗುಂಪಾಗಿದ್ದು, ಊಟದ ಕರಿಬೇವಿನ ಸೊಪ್ಪಿನಂತಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಇಬ್ಬರ ನಡುವೆ ಆಂತರಿಕ ಗಲಾಟೆ ನಡೆಯುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕರ್ನಾಟಕಕ್ಕೆ ಮೂರನೇ ಮುಖ್ಯಮಂತ್ರಿ ಬರಬಹುದು ಎಂದು ಭವಿಷ್ಯ ನುಡಿದರು.
ರಾಜ್ಯ ಸರ್ಕಾರಕ್ಕೆ ಮಾನ-ಮರ್ಯಾದೆ ಇಲ್ಲದಂತಾಗಿದೆ. ನಿರಂತರ ಬೆಲೆ ಏರಿಕೆ ಮೂಲಕ ಜನರಿಗೆ ತೊಂದರೆ ನೀಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.

