ಮಂಗಳೂರು : 12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ದಕ್ಷಿಣ ಕನ್ನಡದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.
2014ರ ಮೇ 15ರಂದು ಮೀನಕಳಿಯ ಗಣೇಶ್ ಶಿಪ್ಪಿಂಗ್ ಗೋಡೌನ್ ಸಮೀಪ ಗಂಗಾಧರ ಪಾಂಗಾಳರನ್ನು ಬೊಲೆರೋ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ಇದನ್ನು ರಸ್ತೆ ಅಪಘಾತವೆಂದು ಬಿಂಬಿಸಲಾಗಿದ್ದರೂ, ಬಳಿಕ ಪಣಂಬೂರು ಪೊಲೀಸರ ತನಿಖೆಯಲ್ಲಿ ಇದು ಪೂರ್ವನಿಯೋಜಿತ ಕೊಲೆ ಎಂಬುದು ಬಹಿರಂಗವಾಗಿತ್ತು. ಪ್ರಕರಣದಲ್ಲಿ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ ಹಾಗೂ ಭಾಸ್ಕರ್ ಬೈಕಂಪಾಡಿ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಹಾಗೂ ಒಳಸಂಚು ಆರೋಪದಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ನಾಲ್ವರು ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ, ಕೊಲೆ ಆರೋಪದಡಿ ಜೀವಾವಧಿ ಶಿಕ್ಷೆ ಹಾಗೂ ತಲಾ ₹15,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷದ ಸಾದಾ ಶಿಕ್ಷೆ ಅನುಭವಿಸಬೇಕಿದೆ. ಜೊತೆಗೆ ಸಾಕ್ಷ್ಯ ನಾಶ ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೆ ಎರಡು ವರ್ಷಗಳ ಸಾದಾ ಶಿಕ್ಷೆ ಹಾಗೂ ತಲಾ ₹1,000 ದಂಡ ವಿಧಿಸಲಾಗಿದೆ.
ವಿಧಿಸಲಾದ ₹60,000 ದಂಡದಲ್ಲಿ ₹50,000 ಅನ್ನು ಮೃತ ಗಂಗಾಧರ ಪಾಂಗಾಳರ ಪುತ್ರಿಗೆ ಪರಿಹಾರವಾಗಿ ಹಾಗೂ ಉಳಿದ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.
ಕೃತ್ಯಕ್ಕೆ ಬಳಸಿದ್ದ ಬೊಲೆರೋ, ರಿಟ್ಜ್ ಹಾಗೂ ಮಾರುತಿ ಕಾರುಗಳನ್ನು ಸರ್ಕಾರದ ವಶಕ್ಕೆ ಪಡೆಯುವಂತೆಯೂ ಆದೇಶಿಸಲಾಗಿದೆ. ಪ್ರಕರಣದ ತನಿಖೆಯನ್ನು ಅಂದಿನ ಪಣಂಬೂರು ಠಾಣೆಯ ಪೊಲೀಸ್ ನಿರೀಕ್ಷಕರಾದ ಎನ್.ಆರ್. ಮುಕ್ರಿ, ಭಾಸ್ಕರ್ ರೈ, ರವೀಶ್ ನಾಯಕ್ ಅವರು ಭಾಗಶಃ ನಡೆಸಿದ್ದು, ಲೋಕೇಶ್ ಎ.ಸಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ ವಾದ ಮಂಡಿಸಿದ್ದರು.


