ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.
ಇದರಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಹಾಗೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತ ಆತಂಕ ಹೆಚ್ಚಾಗಿದೆ. ಪ್ರಸ್ತುತ ಕೆಆರ್ಎಸ್ ಜಲಾಶಯದಲ್ಲಿ 11.399 ಟಿಎಂಸಿ ನೀರು ಸಂಗ್ರಹವಿದ್ದು, ಅದರಲ್ಲಿ ಸುಮಾರು 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಹೀಗಾಗಿ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 6 ಟಿಎಂಸಿ ಮಾತ್ರವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಡ್ಯಾಂನ ನೀರಿನ ಮಟ್ಟ 108 ಅಡಿ ಇತ್ತು. 2019ರಲ್ಲಿ ಮಾತ್ರ ನೀರಿನ ಮಟ್ಟ 80 ಅಡಿಗೆ ಕುಸಿದಿದ್ದ ದಾಖಲೆ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವೇಳೆಗೆ ಮುಂಗಾರು ಮಳೆ ಚುರುಕಾಗಬೇಕಾಗಿದ್ದರೂ ಮಳೆಯ ಕೊರತೆಯಿಂದ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದ ನೀರು ಹರಿದು ಬರುತ್ತಿಲ್ಲ. ಇದೇ ವೇಳೆ, ಕಾವೇರಿ ನೀರು ಹಂಚಿಕೆ ನಿಯಮದಂತೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿರುವುದು ಮತ್ತಷ್ಟು ಸವಾಲಾಗಿ ಪರಿಣಮಿಸಿದೆ.
ಮುಂಗಾರು ಮಳೆ ಮುಂದಿನ ದಿನಗಳಲ್ಲಿ ಉತ್ತಮವಾಗಿ ಆಗದಿದ್ದರೆ ಬೆಂಗಳೂರು ಸೇರಿದಂತೆ ಕಾವೇರಿ ಅವಲಂಬಿತ ಪ್ರದೇಶಗಳಲ್ಲಿ ನೀರಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

