ಮಡಿಕೇರಿ : ಕೊಡಗು ಜಿಲ್ಲೆಯ ಕುಶಾಲನಗರದಿಂದ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಹಾಗೂ ಆಕೆಯ 9 ವರ್ಷದ ಮಗುವನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಮದರಸಾದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲನಗರ ಸಮೀಪದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್ಟಿಸಿ) ಕಾಂಪ್ಲೆಕ್ಸ್ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸಜಿತಾ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರ ತನಿಖೆ ವೇಳೆ ಮಹಿಳೆ ಮತ್ತು ಮಗುವಿನ ಸುಳಿವು ಕೇರಳದಲ್ಲಿ ಪತ್ತೆಯಾಗಿದ್ದು, ಬಳಿಕ ಅವರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ಸಲೀಂ ಹಾಗೂ ಜಲೀಲ್ ಎಂಬುವರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಮಹಿಳೆ ಮತ್ತು ಮಗುವಿನ ಮತಾಂತರ ನಡೆದಿರುವ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಗುವಿನ ಕುರಿತೂ ಕೆಲವು ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖಾ ವರದಿ ಬಳಿಕವೇ ನಿಖರ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ. ಈ ಘಟನೆಗೆ ಸಂಬಂಧಿಸಿ ಕೆಲವು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

