ಮುಂಬೈ : ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮನ್ಖುರ್ದ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಹಳೆಯ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಮೃತರಲ್ಲಿ ಐವರು 5ರಿಂದ 8 ವರ್ಷದೊಳಗಿನ ಮಕ್ಕಳು ಹಾಗೂ 35 ವರ್ಷದ ಮಹಿಳೆ ಸೇರಿದ್ದಾರೆ. ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಇನ್ನೊಂದು ಘಟನೆಯಲ್ಲಿ ಕುರ್ಲಾದ ನವಪದ ಪ್ರದೇಶದಲ್ಲಿ ಅಂಗಡಿಯ ಮೇಲೆ ಮರ ಬಿದ್ದ ಪರಿಣಾಮ 63 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಬಾಂದ್ರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಗಾಳಿ-ಮಳೆಯಿಂದ ಮರಗಳು ಉರುಳಿ ವಾಹನಗಳಿಗೆ ಹಾನಿಯಾಗಿದೆ.
ಪ್ರತಿಕೂಲ ಹವಾಮಾನದಿಂದ ಮುಂಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಗೂ ತೀವ್ರ ಅಡಚಣೆ ಉಂಟಾಗಿದೆ. ರನ್ವೇ ಮೇಲೆ ನೀರು ನಿಂತಿದ್ದರಿಂದ ಸುಮಾರು ಒಂದು ಗಂಟೆ ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ನಾಲ್ಕು ವಿಮಾನಗಳ ಹಾರಾಟ ರದ್ದಾಗಿದ್ದು, 13 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವು ಪ್ರದೇಶಗಳಲ್ಲಿ 200 ಮಿ.ಮೀ.ಗೂ ಅಧಿಕ ಮಳೆಯಾಗಿದ್ದು, ಹವಾಮಾನ ಇಲಾಖೆ ಇನ್ನೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ.


