ಶ್ರೀನಗರ : ಉತ್ತರ ಮತ್ತು ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ದಿಢೀರ್ ಪ್ರವಾಹದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಮ್ಮು-ಕಾಶ್ಮೀರದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಆರಂಭವಾದ ಭಾರೀ ಮಳೆ ಭಾನುವಾರ ಬೆಳಗ್ಗಿನ ವೇಳೆಗೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸರಣಿ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಿಂದ 11 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜೌರಿಯ ದರ್ಹಾಲಿ ನದಿಯ ರಕ್ಷಣಾ ಗೋಡೆ ಒಡೆದು ಪ್ರವಾಹದ ನೀರು ಹೊಸ ಬಸ್ ನಿಲ್ದಾಣ ಸೇರಿದಂತೆ ತಗ್ಗು ಪ್ರದೇಶಗಳಿಗೆ ನುಗ್ಗಿದೆ. ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು, ಬಸ್ಗಳು ಹಾಗೂ ದ್ವಿಚಕ್ರ ವಾಹನಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ.
ಪೂಂಚ್ ಜಿಲ್ಲೆಯ ಸುರನ್ಕೋಟ್ ತಹಸಿಲ್ನಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ 8 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇನ್ನೊಂದೆಡೆ, ನಾಗಾಲ್ಯಾಂಡ್ನ ಮಾನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 8 ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾನ್ ಟೌನ್ ಹಾಗೂ ತಿಜಿತ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಹಿಮಾಚಲ ಪ್ರದೇಶದಲ್ಲೂ ಧಾರಾಕಾರ ಮಳೆಯಿಂದ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಸ್ಥಳೀಯ ಆಡಳಿತದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.


