Tuesday, October 27, 2026
Homeದೇಶಅಮರಾವತಿ : ಆಂಧ್ರ ಕರಾವಳಿಗೆ ಅಪ್ಪಳಿಸಲಿರುವ ಅರ್ನಾಬ್ ಚಂಡಮಾರುತ ; ನಾಲ್ಕು ರಾಜ್ಯಗಳಲ್ಲಿ ಕಟ್ಟೆಚ್ಚರ..!

ಅಮರಾವತಿ : ಆಂಧ್ರ ಕರಾವಳಿಗೆ ಅಪ್ಪಳಿಸಲಿರುವ ಅರ್ನಾಬ್ ಚಂಡಮಾರುತ ; ನಾಲ್ಕು ರಾಜ್ಯಗಳಲ್ಲಿ ಕಟ್ಟೆಚ್ಚರ..!

ಅಮರಾವತಿ : ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಅರ್ನಾಬ್ ಚಂಡಮಾರುತ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದ್ದು, ಅಕ್ಟೋಬರ್ 28ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಚಂಡಮಾರುತದ ಪ್ರಭಾವದಿಂದ ಗಂಟೆಗೆ 125 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ವೇಗ ಗಂಟೆಗೆ 140 ಕಿ.ಮೀ.ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು, ಯಾಣಂ ಹಾಗೂ ರಾಯಲಸೀಮಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 29ರಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

ನಾಲ್ಕು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಅರ್ನಾಬ್ ಚಂಡಮಾರುತದ ಪರಿಣಾಮವಾಗಿ ಒಡಿಶಾ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಪುದುಚೇರಿ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ. ಚಂಡಮಾರುತದ ಚಲನೆ ಹಾಗೂ ಅದರ ತೀವ್ರತೆಯನ್ನು ಹವಾಮಾನ ಇಲಾಖೆ ನಿರಂತರವಾಗಿ ಗಮನಿಸುತ್ತಿದೆ.

ಚಂಡಮಾರುತ ಎದುರಿಸಲು ಸಿದ್ಧತೆ

ಚಂಡಮಾರುತದ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ತಂಡಗಳನ್ನು ನಿಯೋಜಿಸಲಾಗಿದೆ.

ಇದಲ್ಲದೆ, ಸೇನೆ, ನೌಕಾಪಡೆ, ವಾಯುಪಡೆ ಹಾಗೂ ಕರಾವಳಿ ಕಾವಲು ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಧಿಕೃತ ಹವಾಮಾನ ಇಲಾಖೆ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular