ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಬೃಹತ್ ಗಾತ್ರದ ಮರ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಸುಮಾರು 3 ಕಿ.ಮೀ.ವರೆಗೆ ವಾಹನಗಳ ಸಾಲು ನಿರ್ಮಾಣವಾಗಿ ಸಾವಿರಾರು ಪ್ರಯಾಣಿಕರು ಪರದಾಡಿದರು.
ಮಧ್ಯಾಹ್ನದಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿದ ಸಾಧಾರಣ ಮಳೆ ಹಾಗೂ ಬಿರುಗಾಳಿಯಿಂದ ಮರ ರಸ್ತೆಗೆ ಉರುಳಿ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಸಮಾಜಸೇವಕರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಜಿಟಿ-ಜಿಟಿ ಮಳೆಯ ನಡುವೆಯೇ ಮರ ತೆರವು ಕಾರ್ಯಾಚರಣೆ ನಡೆಸಿದರು.
ಪ್ರಯಾಣಿಕರೂ ಸ್ಥಳೀಯರೊಂದಿಗೆ ಕೈಜೋಡಿಸಿ ಮರ ತೆರವುಗೊಳಿಸಲು ಸಹಕರಿಸಿದರು. ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೃಹತ್ ಮರವನ್ನು ತೆರವುಗೊಳಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.


