ಚಿಕ್ಕಮಗಳೂರು: ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮ ಮುಳ್ಳಯ್ಯನಗಿರಿ ತಪ್ಪಲಿನ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ರಸ್ತೆ ಪಕ್ಕದ ಗುಡ್ಡ ಕುಸಿದಿದೆ.

ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಭೂ ಕುಸಿತ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಗುಡ್ಡ ಕುಸಿದ ಪರಿಣಾಮ ರಸ್ತೆ ಮೇಲೆ ಮಣ್ಣು ಮತ್ತು ಕಲ್ಲುಗಳು ಬಿದ್ದಿದ್ದರೂ, ಅಧಿಕಾರಿಗಳು ಜೆಸಿಬಿ ಮೂಲಕ ತಕ್ಷಣ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಅತ್ತಿಗುಂಡಿ, ಮಹಲ್ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗದಲ್ಲೇ ಈ ಘಟನೆ ನಡೆದಿದ್ದು, ಮಳೆ ಮುಂದುವರಿದರೆ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಡಳಿತವು ಸ್ಥಳೀಯರು ಹಾಗೂ ಪ್ರವಾಸಿಗರು ಈ ಮಾರ್ಗದಲ್ಲಿ ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.


