ನವದೆಹಲಿ : ಆಂಧ್ರಪ್ರದೇಶ, ಮಹಾರಾಷ್ಟçಕ್ಕೆ ನಿತ್ಯ 2.5 ಲಕ್ಷ ಲೀಟರ್ ನಂದಿನಿ ಹಾಲು ಪೂರೈಕೆ ಮಾಡುತ್ತಿರುವ ಕೆಎಂಎಫ್ ಇದೀಗ ರಾಷ್ಟçದ ರಾಜಧಾನಿ ದೆಹಲಿ ಮಾರುಕಟ್ಟೆ ಪ್ರವೇಶಿಸಿದೆ. ಆರಂಭಿಕವಾಗಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದ್ದು ಮುಂದಿನ 6 ಆರು ತಿಂಗಳೊಳಗೆ 5 ಲಕ್ಷ ಲೀಟರ್‌ಗೆ ಏರಿಸುವ ಗುರಿ ಹೊಂದಲಾಗಿದೆ.
ಅಮೂಲ್ ಸೇರಿದಂತೆ ಇತರ ಸಂಸ್ಥೆಗಳು ಪ್ರಾಬಲ್ಯ ಹೊಂದಿರುವ ದೆಹಲಿಯಲ್ಲಿ ನಂದಿನಿ ಲಭ್ಯವಾಗುತ್ತಿರುವುದು ವಿಶೇಷವಾಗಿದೆ. ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ನಂದಿನಿ ಬ್ರಾಂಡ್ ನ ವಿವಿಧ ಶ್ರೇಣಿಯ ಹಾಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ದೆಹಲಿಯಲ್ಲಿ ಬಿಡುಗಡೆ ಮಾಡಿದರು.
ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ. ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಹೆಮ್ಮೆ ವ್ಯಕ್ತಪಡಿಸಿದರು.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ : ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ . ರೈತರಿಂದ ಲೀಟರ್‌ಗೆ 32 ರೂ.ಗಳಿಗೆ ಖರೀದಿಸಲಾಗುತ್ತಿದ್ದು, ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಪ್ರತಿ ದಿನ 5 ಕೋಟಿ ರೂ. ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿವೆ. ಪ್ರತಿದಿನ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಶ್ರೇಷ್ಠ ಗುಣಮಟ್ಟ ಹೊಂದಿರುವ ನಂದಿನಿ ಹಾಲು ಈಗಾಗಲೇ ದೇಶವಿದೇಶಗಳಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಂಡಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಮಾರಂಭದಲ್ಲಿ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ,
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಣ್ಣ ನಾಯಕ್, ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ರಾಜ್ಯಸಭಾ ಸದಸ್ಯ ಈರಣ್ಣ ಕರಾಡಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ ಉಪಸ್ಥಿತರಿದ್ದರು.