ಪುತ್ತೂರು : ಯಕ್ಷಗಾನ ಕಲಾವಿದರ ಕುರಿತು ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೆ.21ರಂದು ರಾತ್ರಿ ಮತ್ತೊಮ್ಮೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಮಂಗಳೂರಿನ ಖಾಸಗಿ ಟಿವಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಯಕ್ಷಗಾನದ ಎಪಿಸೋಡ್‌ನಲ್ಲಿ ‘ಬುರುಡೆ ಗ್ಯಾಂಗ್’ ಎಂಬ ಉಲ್ಲೇಖದ ಹಿನ್ನೆಲೆಯಲ್ಲಿ ಯಕ್ಷಗಾನ ಕಲಾವಿದ ಪ್ರಜ್ವಲ್ ಕುಮಾರ್ ಗುರುವಾಯನಕೆರೆ ಅವರಿಗೆ ತಿಮರೋಡಿ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರ ತಾಯಿಯ ಕುರಿತು ಅವಾಚ್ಯ ಶಬ್ದಗಳಿಂದ ಮಾತನಾಡಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸೆ.21ರಂದು ರಾತ್ರಿ ಠಾಣೆಗೆ ಹಾಜರಾದ ತಿಮರೋಡಿ ಅವರು ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ತನಿಖೆಗೆ ಸಹಕರಿಸಿರುವುದಾಗಿ ತಿಳಿದುಬಂದಿದ್ದು, ತಿಮರೋಡಿ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿದಾರರ ಹೇಳಿಕೆಗಳನ್ನೂ ವಿಡಿಯೋ ಮೂಲಕ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಸೆ.19ರಂದು ಕೂಡ ತಿಮರೋಡಿ ಠಾಣೆಗೆ ಹಾಜರಾಗಿದ್ದರು. ಆದರೆ ಆ ಸಂದರ್ಭದಲ್ಲಿ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯದ ನಿಮಿತ್ತ ಠಾಣೆಯಿಂದ ಹೊರಗಿದ್ದ ಹಿನ್ನೆಲೆಯಲ್ಲಿ, ತಿಮರೋಡಿ ಠಾಣೆಗೆ ಹಾಜರಾಗಿರುವ ಕುರಿತು ಲಿಖಿತ ನೋಟೀಸ್ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಮತ್ತೊಂದೆಡೆ, ಪುತ್ತೂರು ಆಯುಕ್ತರು ಹೊರಡಿಸಿದ್ದ ಗಡಿಪಾರು ಆದೇಶವನ್ನೂ ಹೈಕೋರ್ಟ್ ರದ್ದುಪಡಿಸಿತ್ತು. ಸೆ.21ರಂದು ಠಾಣೆಗೆ ಹಾಜರಾದ ಸಂದರ್ಭದಲ್ಲಿ ದಿನೇಶ್ ಜೈನ್, ಹರಿಪ್ರಸಾದ್ ನೆಲ್ಲಿಕಟ್ಟೆ, ಧನ್ಯಕುಮಾರ್ ಬೆಳದೂರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಹೇಳಿಕೆಗಳು ಹಾಗೂ ಲಭ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

