ಬಾಗಲಕೋಟೆ : ಜಿಲ್ಲೆಯ ಸೂರಗಾಂವಿ ಗ್ರಾಮದಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಜೀವ ದಹನಗೊಂಡಿದ್ದಾರೆ.
ಮೃತ ಯುವಕನನ್ನು ಮುಧೋಳ ನಗರದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೊರ್ಕ್ (20) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರು ಜಮಾಯಿಸಿದ್ದರು.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಕೈಗೊಳ್ಳಲಾಗಿದೆ.
ಈ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


