ಬೀದರ್ : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿ, ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಆರು ಕಾರುಗಳು ಸುಟ್ಟು ಕರಕಲಾದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ನಲ್ಲಿ ನಡೆದಿದೆ.
ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿಯಿಂದ ಹಾರಿದ ಕಿಡಿ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಆರು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಪೊಲೀಸರು ಜಪ್ತಿ ಮಾಡಿ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳೇ ಬೆಂಕಿಗೆ ಆಹುತಿಯಾಗಿವೆ.
ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟರಲ್ಲಾಗಲೇ ಕಾರುಗಳು ಬಹುತೇಕ ಸುಟ್ಟು ಹೋಗಿದ್ದವು.
ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಟಾಕಿ ಕಿಡಿಯಿಂದಲೇ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

