Thursday, November 12, 2026
Homeರಾಜ್ಯಬೆಂಗಳೂರು : ಆರೆಸ್ಸೆಸ್‌ಗೆ ಅಂಕುಶ ಹಾಕಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್‌ಗೆ ಕಾನೂನು ತೊಡಕು, ಚಳಿಗಾಲದ...

ಬೆಂಗಳೂರು : ಆರೆಸ್ಸೆಸ್‌ಗೆ ಅಂಕುಶ ಹಾಕಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್‌ಗೆ ಕಾನೂನು ತೊಡಕು, ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್.?

ಬೆಂಗಳೂರು : ಆರೆಸ್ಸೆಸ್ ಸೇರಿದಂತೆ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿಯಂತ್ರಣ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವದ ಮಸೂದೆ ಮಂಡನೆಗೆ ಸದ್ಯಕ್ಕೆ ಹಿನ್ನಡೆಯಾಗಿದೆ. ಮುಂಬರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲೂ ಮಸೂದೆ ಮಂಡನೆಯಾಗುವುದು ಅನುಮಾನ ಎನ್ನಲಾಗಿದೆ.

ಸರ್ಕಾರಿ ಆವರಣ ಹಾಗೂ ಸಾರ್ವಜನಿಕ ಆಸ್ತಿಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಸರಕಾರಿ ಆವರಣ ಹಾಗೂ ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ-2026’ ರೂಪಿಸಿದೆ. ಸರ್ಕಾರಿ ಸ್ಥಳಗಳು ಮತ್ತು ಸಾರ್ವಜನಿಕ ಆಸ್ತಿಗಳನ್ನು ಸಂಘ-ಸಂಸ್ಥೆಗಳು ಹಾಗೂ ವ್ಯಕ್ತಿಗಳು ಬಳಸುವುದಕ್ಕೆ ನಿಯಂತ್ರಣ ಹೇರುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ.

ಆದರೆ ಮಸೂದೆಯ ಕೆಲವು ಅಂಶಗಳಿಗೆ ಕಾನೂನು ಇಲಾಖೆಯ ಹಂತದಲ್ಲೇ ಆಕ್ಷೇಪ ವ್ಯಕ್ತವಾಗಿದೆ ಎನ್ನಲಾಗಿದೆ. ಮಸೂದೆಯ ಸಾಧಕ-ಬಾಧಕಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅಡ್ವಕೇಟ್ ಜನರಲ್ (ಎಜೆ), ಮೂರು ಪ್ರಮುಖ ತಿದ್ದುಪಡಿಗಳೊಂದಿಗೆ ಮಸೂದೆಯನ್ನು ಮಂಡಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ಈ ಹಿಂದೆ ನಡೆದ ವಿಧಾನಮಂಡಲ ಅಧಿವೇಶನದಲ್ಲೂ ಮಸೂದೆ ಮಂಡನೆಗೆ ಗೃಹ ಇಲಾಖೆಯಿಂದ ಸಿದ್ಧತೆ ನಡೆದಿತ್ತು. ಆದರೆ ಮಸೂದೆಯ ಕಾನೂನು ಪರಿಣಾಮಗಳ ಕುರಿತು ತಜ್ಞರ ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಕಡತವನ್ನು ತಮ್ಮ ಬಳಿಯೇ ಇರಿಸಿಕೊಂಡು ಅಡ್ವಕೇಟ್ ಜನರಲ್ ಅವರಿಂದ ಅಭಿಪ್ರಾಯ ಕೋರಿದ್ದರು.

ಇದೀಗ ಮೂರು ಪ್ರಮುಖ ತಿದ್ದುಪಡಿಗಳನ್ನು ಮಾಡುವಂತೆ ಎಜೆ ಸಲಹೆ ನೀಡಿರುವುದರಿಂದ ಮಸೂದೆ ಮಂಡನೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುತ್ತದೆಯೇ ಅಥವಾ ಮುಂದಿನ ಅಧಿವೇಶನಕ್ಕೆ ಮುಂದೂಡಿಕೆಯಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಆರೆಸ್ಸೆಸ್ ಸೇರಿದಂತೆ ಸಂಘ-ಸಂಸ್ಥೆಗಳ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದ ಈ ಮಸೂದೆ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular