ಬೆಂಗಳೂರು ; ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೆಡ್ಲೈನ್ ಮಾಸ್ತರ್ ಎಂದೇ ಪರಿಚಿತರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ರವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಇನ್ನೂ ಹಲವು ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ. ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. “