ಬೆಂಗಳೂರು : ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ. ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ, ಪ್ರಕರಣದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ನೀಡಿದೆ.
ಆದರೆ, ಈ ತಡೆಯಾಜ್ಞೆಯನ್ನು ಕೆಲವು ಷರತ್ತುಗಳಿಗೆ ಒಳಪಡಿಸಲಾಗಿದೆ. ಆರೋಪಿಯಾದ ಅರ್ಜಿದಾರರು ಸ್ವತಃ ಅಥವಾ ತಮ್ಮ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು ₹75 ಸಾವಿರವನ್ನು ಪಾವತಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.
ಇದಲ್ಲದೆ, ಮುಂದಿನ ಒಂದು ವಾರದೊಳಗೆ ಮೊದಲ ಕಂತಿನ ರೂಪದಲ್ಲಿ ₹75 ಸಾವಿರವನ್ನು ಸಂತ್ರಸ್ತೆಗೆ ನೀಡಬೇಕು. ನಂತರ ಪ್ರತಿ ತಿಂಗಳು ನಿಯಮಿತವಾಗಿ ಹಣ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.


