ಬೆಂಗಳೂರು : ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ರಾಜ್ಯ ರಾಜಧಾನಿಯ ಜನರನ್ನು ರಂಜಿಸಲು ಮತ್ತು ಪುಳಕಿತಗೊಳಿಸಲು ಸಜ್ಜಾಗಿದೆ. ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕ್ರೀಡೆಯನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಬೆಂಗಳೂರು ತುಳು ಕೂಟದ ಸುವರ್ಣ ಮಹೋತ್ಸವದ ಅಂಗವಾಗಿ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಂಬಳದ ವ್ಯವಸ್ಥೆ ನಡೆಯುತ್ತಿದೆ. ಮೈಸೂರು ರಾಜಮನೆತನದವರೂ ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಅನುಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.