ಬೆಂಗಳೂರು : ರಾಜಧಾನಿ ಹೊರವಲಯದಲ್ಲಿ ನಡೆದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಕಲ್ಲು ಕ್ವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆಯನ್ನು ಟ್ರ್ಯಾಕ್ಟರ್ ಸಹಾಯದಿಂದ ಜರುಗಿಸಲಾಗುತ್ತಿತ್ತು. ಈ ವೇಳೆ ಬಂಡೆ ಏಕಾಏಕಿ ನಿಯಂತ್ರಣ ತಪ್ಪಿ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಉರುಳಿ ಬಿದ್ದಿದೆ. ಪರಿಣಾಮ, ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬಿಹಾರ ಮೂಲದವರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ದುರಂತದ ಬಳಿಕ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದ ಮೇಸ್ತ್ರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ದುರಂತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


