ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 2023 ರ ಸೆಪ್ಟೆಂಬರ್ 24 ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.ಮರುದಿನ, ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿದ ನಂತರ ಮಸೀದಿಯವರು ಪೊಲೀಸರಿಗೆ ದೂರು ನೀಡಿದ್ದರು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನೂ ಅವರು ಒದಗಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಆದರೆ ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು. ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಈ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವಾಗ, ಘೋಷಣೆಯು ಘರ್ಷಣೆಗೆ ಕಾರಣವಾಗಬಹುದು ಎನ್ನಲಾಗದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದ್ದಾರೆ.ಅದಲ್ಲದೆ ಈ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಹೈಕೋರ್ಟ್, ಶಾಂತಿ ಸ್ಥಾಪನೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ಪರಿಣಾಮ ಬೀರದ ಕೃತ್ಯಗಳು ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದೆ.