ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈ ಹಿಂದೆ ನೀಡಿದ್ದ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿ ರುವ ಬಡಾವಣೆಗಳಲ್ಲಿನ ‘ಬಿ- ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್ಮೆಂಟ್ ಹಾಗೂ ಫ್ಲಾಟ್‌ಗಳಿಗೆ ಎ-ಖಾತಾ” ನೀಡಲು ಗುರುವಾರ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆ ಮೂಲಕ ಪೆನಾಲ್ಟಿ ರೂಪದಲ್ಲೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡಮೊತ್ತದ ಹಣ ಜಮೆಯಾಗಲಿದೆ.
ಪರಿವರ್ತನೆಗೆ ಷರತ್ತು ಅನ್ವಯ: ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿ, ರಾಜ್ಯದ ಮಹಾನಗರ ಪಾಲಿಕೆಗಳು, ನಗರ ಪಾಲಿಕೆ, ನಗರಸಭೆ, ಪುರಸಭೆ,ಪಟ್ಟಣ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ೧೯೬೧ರ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯನ್ನು ಉಲ್ಲಂಘಿಸಿ, ಅನಧಿಕೃತವಾಗಿ ರಚಿಸಿರುವ ಬಡಾವಣೆಗಳಲ್ಲಿನ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಮಾನ್ಯತೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ವಿವರಿಸಿದರು.


