ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನ ಸರ್ಕಾರಿ ಮುಖ್ಯ ಸಚೇತಕರಾಗಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 21, 2026ರಿಂದ ಜಾರಿಗೆ ಬರುವಂತೆ ನೇಮಕಾತಿ ಆದೇಶ ಹೊರಡಿಸಲಾಗಿದೆ.
ಕರಾವಳಿ ಭಾಗದ ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಡಾ. ಮಂಜುನಾಥ ಭಂಡಾರಿ ಅವರಿಗೆ ಈ ಮಹತ್ವದ ಜವಾಬ್ದಾರಿ ಒಲಿದಿದೆ. ತಳಮಟ್ಟದ ರಾಜಕೀಯ ಸಂಘಟನೆಯಿಂದ ಆರಂಭವಾದ ಅವರ ಸುದೀರ್ಘ ಪಯಣ ಇದೀಗ ವಿಧಾನ ಪರಿಷತ್ನ ಪ್ರಮುಖ ಜವಾಬ್ದಾರಿಯುತ ಸ್ಥಾನಕ್ಕೆ ತಲುಪಿದೆ.
1978ರಿಂದ ಆರಂಭವಾದ ರಾಜಕೀಯ ಪಯಣ
1978ರ ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಪರವಾಗಿ ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಅಂದಿನಿಂದ ಪಕ್ಷದ ಸಂಘಟನೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
NSUIಯ ಜಿಲ್ಲಾ ಹಾಗೂ ರಾಷ್ಟ್ರೀಯ ಮಟ್ಟದ ಅಧ್ಯಕ್ಷರಾಗಿ, ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಮತ್ತು ಭಾರತೀಯ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ಹಾಗೂ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಪ್ರಸ್ತುತ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಐಸಿಸಿ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಉನ್ನತ ಶೈಕ್ಷಣಿಕ ಅರ್ಹತೆ
ರಾಜಕೀಯದ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಆಸಕ್ತಿ ಹೊಂದಿರುವ ಡಾ. ಭಂಡಾರಿ ಅವರು ಇಂಜಿನಿಯರಿಂಗ್ ಪದವಿ ವ್ಯಾಸಂಗದ ಬಳಿಕ ರಾಜಕೀಯ ಶಾಸ್ತ್ರದಲ್ಲಿ ಎಂ.ಎ. ಮತ್ತು ಎಂ.ಫಿಲ್ ಪದವಿಗಳನ್ನು ಪಡೆದಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ. ಪದವಿ ಸಂಪಾದಿಸಿದ್ದಾರೆ.
ಜನಪರ ಯೋಜನೆಗಳ ರೂಪಿಸುವಲ್ಲಿ ಕೊಡುಗೆ
ಗ್ರಾಮೀಣ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಅವರು ರೂಪಿಸಿದ ‘ರಾಜೀವ್ ವಿಕಾಸ ಕೇಂದ್ರ’ ಪರಿಕಲ್ಪನೆಯು ಗ್ರಾಮೀಣ ಸಾಮಾನ್ಯ ಸೇವಾ ಕೇಂದ್ರಗಳ (CSC) ಯೋಜನೆಗೆ ಪ್ರೇರಣೆಯಾಯಿತು. ಇದರೊಂದಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸುವ ‘ಇಂದಿರಾ ಜ್ಯೋತಿ’ ಯೋಜನೆಯನ್ನು ರಾಜ್ಯ ಬಜೆಟ್ನಲ್ಲಿ ಸೇರ್ಪಡೆಗೊಳಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.
ಶಿಕ್ಷಣ ಕ್ಷೇತ್ರದಲ್ಲೂ ಮಹತ್ವದ ಸಾಧನೆ
2001ರಲ್ಲಿ ಭಂಡಾರಿ ಪ್ರತಿಷ್ಠಾನವನ್ನು ಸ್ಥಾಪಿಸಿದ ಅವರು, ಮಂಗಳೂರಿನಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವಲ್ಲಿ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ.
ಅಂತರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡ ನಾಯಕ
2004ರಲ್ಲಿ ಪ್ರತಿಷ್ಠಿತ ಐಸೆನ್ಹೋವರ್ ಫೆಲೋಶಿಪ್ ಗೌರವಕ್ಕೆ ಪಾತ್ರರಾಗಿದ್ದ ಡಾ. ಭಂಡಾರಿ ಅವರು ವಿವಿಧ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಯುವ ನಾಯಕತ್ವವನ್ನು ಪ್ರತಿನಿಧಿಸಿದ್ದಾರೆ. ಅಮೆರಿಕ, ಇಸ್ರೇಲ್, ಬಾರ್ಸಿಲೋನಾ ಸೇರಿದಂತೆ ಹಲವು ದೇಶಗಳ ಅಧಿಕೃತ ಹಾಗೂ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ರಾಜಕೀಯ ಸಂಘಟನೆ, ಶಿಕ್ಷಣ, ಸಾಮಾಜಿಕ ಸೇವೆ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಡಾ. ಮಂಜುನಾಥ ಭಂಡಾರಿ ಅವರಿಗೆ ಇದೀಗ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರ ಜವಾಬ್ದಾರಿ ಲಭಿಸಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅವರ ಹೊಸ ಜವಾಬ್ದಾರಿಯು ಮೇಲ್ಮನೆಯ ಕಲಾಪಗಳ ನಿರ್ವಹಣೆಗೆ ಮತ್ತಷ್ಟು ಬಲ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

