ಬೆಳ್ತಂಗಡಿ : 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 315/2015ರಡಿ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಹಾಗೂ 295(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ರಾಮಲಿಂಗಪ್ಪ ಅವರು, ಭಾರತೀಯ ದಂಡ ಸಂಹಿತೆಯ ಕಲಂ 153(A) ಅಡಿಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಆಶಿತಾ ಸಮರ್ಥವಾಗಿ ವಾದ ಮಂಡಿಸಿದ್ದರು.

