ಮಂಗಳೂರು : “ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ.
“ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಪ್ರತಿನಿಧಿಸಿದ್ದರು. ಈಗಿನ ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ. ಅವರು ಮಂಡ್ಯ ಹಾಗೂ ರಾಮನಗರದಲ್ಲಿ ಸೋತಿದ್ದಾರೆ” ಎಂದು ತಿಳಿಸಿದರು.
“ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂದು ಹೇಳಬೇಕು. ಯೋಗೇಶ್ವರ್ ಪಕ್ಷಾಂತರಿ ಇರಬಹುದು, ಇಲ್ಲ ಎಂದು ಹೇಳುವುದಿಲ್ಲ. ಕಾಂಗ್ರೆಸ್ ನಲ್ಲಿ ಇದ್ದವರು ಸಮಾಜವಾದಿ ಪಕ್ಷ, ಬಿಜೆಪಿ ಪಕ್ಷಕ್ಕೆ ಹೋಗಿದ್ದರು. ಎನ್ಡಿಎ ಮೈತ್ರಿ ಸರಿಯಿಲ್ಲ, ಕುಮಾರಸ್ವಾಮಿ ಸರಿಯಿಲ್ಲ. ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದಿಂದ ಒಳ್ಳೆಯದಾಗಲಿದೆ ಎಂದು ಈಗ ಮತ್ತೆ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ತಿಳಿಸಿದರು.
“ಚನ್ನಪಟ್ಟಣ ತಾಲ್ಲೂಕಿನ ಜನ ವಿದ್ಯಾವಂತರು, ಪ್ರಜ್ಞಾವಂತರಿದ್ದಾರೆ. ನಮ್ಮ ಸರ್ಕಾರ ಅವರ ಸೇವೆ ಮಾಡಲು ಮನೆ ಬಾಗಿಲಿಗೆ ಹೋಗಿದೆ. 22 ಸಾವಿರ ಜನ ತಮ್ಮ ಕಷ್ಟವನ್ನು ನಮ್ಮ ಬಳಿ ಹೇಳಿಕೊಂಡಿದ್ದಾರೆ. ನೂರಾರು ಕೋಟಿ ಅಭಿವೃದ್ಧಿ ಕೆಲಸ ಪ್ರಾರಂಭವಾಗಿದೆ. ಬಡವರಿಗೆ ನಿವೇಶನ ನೀಡಲಾಗುತ್ತಿದೆ” ಎಂದರು.
ಕಾಂಗ್ರೆಸ್ ನಾಯಕರಿಗೆ ಮನುಷ್ಯತ್ವವಿಲ್ಲ, ನಾವು ಭಾವುಕ ಜೀವಿ, ಹೀಗಾಗಿ ಕಣ್ಣೀರು ಹಾಕುತ್ತೇವೆ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಚನ್ನಪಟ್ಟಣ ಅಥವಾ ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಅಲ್ಲಿನ ಯಾವ ಕೆರೆಗೆ ನೀರು ತುಂಬಿಸಿದ್ದಾರೆ? ಚನ್ನಪಟ್ಟಣ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಿದ್ದು ಯೋಗೇಶ್ವರ್ ಅವರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಆ ಕ್ಷೇತ್ರಕ್ಕೆ ಸಣ್ಣ ಕೆಲಸವನ್ನೂ ಮಾಡಿಲ್ಲ. ಕೇವಲ ಶಾಸಕರಾಗಿದ್ದಾಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಕುಮಾರಸ್ವಾಮಿ ಅನುದಾನ ತಂದು ಕೆಲಸ ಮಾಡಬೇಕಿತ್ತಲ್ಲವೇ? ಏಕೆ ಮಾಡಲಿಲ್ಲ” ಎಂದು ಪ್ರಶ್ನಿಸಿದರು.
“ನಮ್ಮ ಸರ್ಕಾರ ರಾಜ್ಯದ ಎಲ್ಲಾ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಜನತಾದಳದಲ್ಲಿ ಭವಿಷ್ಯವಿಲ್ಲ ಎಂದು ಅನೇಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ” ಎಂದರು.
ಕರ್ನಾಟಕದ ಆರ್ಥಿಕತೆ ಸಧೃಢವಾಗಿದೆ:
ಗ್ಯಾರಂಟಿ ಯೋಜನೆ ನಿಭಾಯಿಸಲು ಆಗುತ್ತಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಿಭಾಯಿಸಲು ಆಗುತ್ತಿಲ್ಲ ಎಂದು ಹೇಳಿದವರು ಯಾರು? ದೇಶದ ಆರ್ಥಿಕತೆಗಿಂತ ನಮ್ಮ ರಾಜ್ಯದ ಆರ್ಥಿಕತೆ ಸಧೃಢವಾಗಿದೆ” ಎಂದರು.
ಅಧಿಕಾರಿಗಳ ತಪ್ಪು ಸರಿಮಾಡುತ್ತೇವೆ:
ವಕ್ಫ್ ಆಸ್ತಿ ರಾಷ್ಟ್ರೀಕರಣ ಮಾಡಬೇಕು ಎಂಬ ಯತ್ನಾಳ್ ಅವರ ಪತ್ರದ ಬಗ್ಗೆ ಕೇಳಿದಾಗ, “ಮಾನಸಿಕ ಅಸ್ವಸ್ಥರ ಹೇಳಿಕೆ ಬಗ್ಗೆ ಮಾತನಾಡುವುದಿಲ್ಲ. ಈ ವಿಚಾರವಾಗಿ ರೈತರಿಗೆ ಮೊದಲು ನೋಟಿಸ್ ನೀಡಿದ್ದು ಬಿಜೆಪಿ ಸರ್ಕಾರ. ನಾವು ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅಧಿಕಾರಿಗಳು ಮಾಡಿರುವ ತಪ್ಪನ್ನು ನಾವು ಸರಿಪಡಿಸುತ್ತೇವೆ” ಎಂದು ತಿಳಿಸಿದರು.
ಚುನಾವಣೆಗಾಗಿ ಗ್ಯಾರಂಟಿ ಬಗ್ಗೆ ಟೀಕೆ:
ಗ್ಯಾರಂಟಿ ಯೋಜನೆ ಬಗ್ಗೆ ಪ್ರಧಾನಿ ಅವರ ಟೀಕೆ ಬಗ್ಗೆ ಕೇಳುದಾಗ, “ಅವರು ಚುನಾವಣೆಗಾಗಿ ಏನು ಬೇಕಾದ್ರೂ ಹೇಳಲಿ. ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಹೊಟ್ಟೆ ತುಂಬಿಸಿ, ಬದುಕು ಕಟ್ಟುತ್ತಿವೆ. ಆಮೂಲಕ ದೇಶದ ಅಭಿವೃದ್ಧಿಗೆ ಕಾರಣವಾಗಿವೆ. ಆರ್ಥಿಕವಾಗಿ ಸಬಲವಾಗಿರುವವರು ದೊಡ್ಡ ಕಂಪನಿಯ ಉದ್ಯೋಗಸ್ಥ ಮಹಿಳೆಯರು ನಮಗೆ ಸಾರಿಗೆ ಭತ್ಯೆ ಸಿಗುತ್ತಿದೆ. ನಮಗೆ ಶಕ್ತಿ ಯೋಜನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮಂತ್ರಿಗಳ ಜತೆ ಚರ್ಚೆ ಮಾಡುತ್ತೇವೆ ಎಂದು ನಾನು ಹೇಳಿದ್ದೆ. ನಮ್ಮ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆಯನ್ನು ನಾವು ಮಂಗಳೂರಿನಲ್ಲೇ ಘೋಷಣೆ ಮಾಡಿದ್ದು, ಇದನ್ನು ನಿಲ್ಲಿಸುವುದಿಲ್ಲ. ಮುಂದಿನ ಅವಧಿಯ ಐದು ವರ್ಷವೂ ಈ ಯೋಜನೆ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ವೃದ್ಧಾಪ್ಯ ವೇತನ, ವಿಧವಾ ಪಿಂಚಣಿ, ಉಳುವವನಿಗೆ ಭೂಮಿ, ಬಡವರಿಗೆ ನಿವೇಶನ, ಮನೆ ನೀಡುವ ಕಾರ್ಯಕ್ರಮ ಜಾರಿ ಮಾಡಿದ್ದು, ಇಂದಿಗೂ ಈ ಯೋಜನೆಗಳು ಜಾರಿಯಲ್ಲಿವೆ. ಯಾವುದನ್ನೂ ನಾವು ಹಿಂಪಡೆದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ನಮ್ಮ ಕಾರ್ಯಕ್ರಮ ನಿಲ್ಲಿಸಲು ಆಗಿಲ್ಲ. ನಮ್ಮ ಕಾರ್ಯಕ್ರಮಗಳು ಬದುಕು ಕಟ್ಟುವ ಕಾರ್ಯಕ್ರಮ. ಬಿಜೆಪಿಯವರು ಕೇವಲ ಭಾವನೆ ಮೇಲೆ ರಾಜಕೀಯ ಮಾಡುತ್ತಾರೆ” ಎಂದು ತಿಳಿಸಿದರು.
ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದ್ದಾರೆ. ಮಧ್ಯಪ್ರದೇಶ, ಹರಿಯಾಣದಲ್ಲೂ ಘೋಷಣೆ ಮಾಡಿದ್ದಾರೆ. ಈಗ ಮಹಾರಾಷ್ಟ್ರದಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಮ್ಮ ಯೋಜನೆ ನಕಲು ಮಾಡುತ್ತಿರುವುದಕ್ಕೆ ಅವರಿಗೆ ಮುಜುಗರವಾಗುತ್ತಿದೆ. ಹೀಗಾಗಿ ಟೀಕೆ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.