Tuesday, November 24, 2026
Homeಕ್ರೀಡೆಮಂಗಳೂರು : ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿ..!

ಮಂಗಳೂರು : ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿ..!

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಹಾಗೂ ಬರವಣಿಗೆ ಕ್ಷೇತ್ರದಲ್ಲಿ ಕಳೆದ 36 ವರ್ಷಗಳಿಂದ ಸಕ್ರಿಯರಾಗಿರುವ ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು ಪ್ರತಿಷ್ಠಿತ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಸಾಹಿತ್ಯ ಉತ್ಸವದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಈ ಪ್ರಶಸ್ತಿ ನೀಡುತ್ತಿದೆ.

ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಈವರೆಗೆ 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳು ಹಾಗೂ ಅಂಕಣ ಬರಹಗಳನ್ನು ರಚಿಸಿದ್ದಾರೆ. ಇವರ ಬರಹಗಳು ಜಿಲ್ಲೆ, ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳು, ವಾರಪತ್ರಿಕೆಗಳು ಮತ್ತು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ವಿಶ್ಲೇಷಿಸುವ ವಿಮರ್ಶಾತ್ಮಕ ಲೇಖನಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಅವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವೆಂಬರ್ 28 ಮತ್ತು 29ರಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ಸಮ್ಮೇಳನದಲ್ಲಿ ನವೆಂಬರ್ 29ರಂದು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಈ ಕುರಿತು ಮಾಹಿತಿ ನೀಡಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು, ಅಂಚನ್ ಅವರ ದೀರ್ಘಕಾಲದ ಕ್ರೀಡಾ ಪತ್ರಿಕೋದ್ಯಮ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular