ಮಂಗಳೂರು : ರಾಜ್ಯ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಹೋರಾಟಕ್ಕೆ ಮುಂದಾಗಲು ಜನತಾದಳ (ಜಾತ್ಯತೀತ) ಪಕ್ಷ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 12ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ನ ಮುಖಂಡರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಪ್ರಚಾರದೊಂದಿಗೆ ಸಂಪುಟ ಸಭೆ ನಡೆಸಿ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ರಾಜ್ಯ ಸರ್ಕಾರ, ಅವುಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ.
ಹಾಲು, ಮೊಸರು, ಬಸ್ ಪ್ರಯಾಣ ದರ ಹಾಗೂ ಹೋಟೆಲ್ ದರಗಳ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿವಿಧ ಹಗರಣಗಳ ಆರೋಪಗಳಿಂದಲೂ ಸರ್ಕಾರ ಸುತ್ತುವರಿದಿದ್ದು, ಜನರ ಆಕ್ರೋಶ ಹೆಚ್ಚುತ್ತಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಹಬ್ಬದ ಮುನ್ನ ಬಿಡುಗಡೆ ಮಾಡಿರುವುದಾಗಿ ಸರ್ಕಾರ ಪ್ರಚಾರ ನಡೆಸಿದ್ದರೂ, ಹಲವು ಫಲಾನುಭವಿಗಳಿಗೆ ಇನ್ನೂ ಹಣ ತಲುಪಿಲ್ಲ ಎಂಬ ಆರೋಪವನ್ನೂ ಮಾಡಿದ್ದಾರೆ.
ಈ ಎಲ್ಲಾ ವಿಚಾರಗಳು, ಜಿಲ್ಲೆಯ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಖರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತದೆ.
ಈ ದಿನಾಂಕ ನವೆಂಬರ್ 12 ರಂದು ಗುರುವಾರ ಬೆಳಿಗ್ಗೆ 11 ಗಂಟೆನಗರದ ಕೊಡಿಯಾಲಬೈಲ್ na ಓಷನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷರು ವಹಿಸಲಿದ್ದಾರೆ.
ಸಭೆಯಲ್ಲಿ ರಾಜ್ಯದ ಹಿರಿಯ ನಾಯಕರು, ನೂತನವಾಗಿ ಆಯ್ಕೆಯಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಹಂತಗಳ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಪಕ್ಷದ ಎಲ್ಲಾ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್ ಮನವಿ ಮಾಡಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಕೊಳಂಬೆ, ವಸಂತ ಪೂಜಾರಿ, ಇಕ್ಬಲ್ ಅಹ್ಮದ್ ಮುಲ್ಕಿ, ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜೆಪ್ಪು, ಮಾಜಿ ಪುರಸಭಾ ಸದಸ್ಯ ಅಝೀಜ್ ಕುದ್ರೋಳಿ, ಕರುಣಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

