ಮಂಗಳೂರು : ನಕಲಿ ಟ್ವಿಟ್ಟರ್ ಖಾತೆ ಬಳಸಿ ದೈವಾರಾಧನೆ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬಂಧಿಸಿದ್ದಾರೆ. ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಪ್ರಕಾರ, ಬೆಂಗಳೂರಿನ ಅಮೃತಹಳ್ಳಿ ಮೂಲದ ಶಿವರಾಜ್ ಎಚ್ ಕೆ (37) ಬಂಧಿತ ಆರೋಪಿ. ಬಂಧಿತನನ್ನು ಮಂಗಳೂರಿನ ಏಳನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದೈವಾರಾಧನೆಗೆ ಸಂಬಂಧಿಸಿದಂತೆ ಮಹಿಳೆಯರ ಅಶ್ಲೀಲ ಚಿತ್ರಗಳ ಸಹಿತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಮಂಗಳೂರಿನ ಸಿಇಎನ್ ಠಾಣೆಗೆ ದೂರು ಸಲ್ಲಿಸಿತ್ತು. ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಲು ನಕಲಿ ಟ್ವಿಟರ್ ಖಾತೆಯನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಮೇರೆಗೆ ಪೊಲೀಸರು ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 153 (ಎ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಂತರ ಬಂಧಿತ ವ್ಯಕ್ತಿಯನ್ನು ಮಂಗಳೂರಿನ ಏಳನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.