ಮಂಗಳೂರು : ಭಾರೀ ಮಳೆಯ ಅಬ್ಬರಕ್ಕೆ ನಗರದ ಬಾವುಟಗುಡ್ಡೆ ಅಲೋಶಿಯಸ್ ಕಾಲೇಜು ಸಮೀಪದ ಒಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರವು ಕಾರಿನ ಹಿಂಭಾಗಕ್ಕೆ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು, ಪಕ್ಕದಲ್ಲಿದ್ದ ಕ್ಯಾಂಟೀನ್ಗೂ ಹಾನಿಯಾಗಿದೆ. ಘಟನೆಯ ಬಳಿಕ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಮಾಹಿತಿ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳ, ಎಸ್ಡಿಆರ್ಎಫ್ (SDRF), ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.
ಭಾರೀ ಮಳೆಯ ಹಿನ್ನೆಲೆಯಲ್ಲಿ ನಗರದಲ್ಲಿ ದುರ್ಬಲ ಮರಗಳ ಅಪಾಯ ಹೆಚ್ಚಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



