ಮಂಗಳೂರು : ನಗರದ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ನಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಣಂಬೂರು ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

