ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಕರ್ನಾಟಕ ಇ-ರಾಜ್ಯಪತ್ರದಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

