Friday, July 3, 2026
Homeಜಿಲ್ಲೆಮಂಗಳೂರು : ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ಡಕಾಯಿತಿ ಪ್ರಕರಣ ಭೇದಿಸಿದ ಪೊಲೀಸರು; 3 ಆರೋಪಿಗಳ...

ಮಂಗಳೂರು : ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ಡಕಾಯಿತಿ ಪ್ರಕರಣ ಭೇದಿಸಿದ ಪೊಲೀಸರು; 3 ಆರೋಪಿಗಳ ಬಂಧನ, 13 ಮಂದಿಗಾಗಿ ಶೋಧ.

ಮಂಗಳೂರು : ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜೂನ್ 29ರ ನಸುಕಿನ ವೇಳೆ ನಡೆದಿದ್ದ ಭಾರೀ ಡಕಾಯಿತಿ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ.

ಪ್ರಕರಣದಲ್ಲಿ ಕೃತ್ಯಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ 13 ಮಂದಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ಕುಟುಂಬದೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಸುಬ್ಬರಾವ್ ಧನವಡೆ ಅವರ ಕಾರನ್ನು ಬೈಕಂಪಾಡಿ ಸಮೀಪ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ ಮುಸುಕುಧಾರಿಗಳ ತಂಡ ಅಡ್ಡಗಟ್ಟಿತ್ತು. ತಲವಾರು ತೋರಿಸಿ ಹಲ್ಲೆ ನಡೆಸಿದ ಆರೋಪಿಗಳು, ದೂರುದಾರರ ಪತ್ನಿ ಹಾಗೂ ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು, ಕಾರು, ಸುಮಾರು 180 ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು ₹23.10 ಲಕ್ಷ ಮೌಲ್ಯದ ಆಸ್ತಿ ದರೋಡೆ ಮಾಡಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಪಣಂಬೂರು ಪೊಲೀಸರು ತನಿಖೆ ನಡೆಸಿ, ಜೂನ್ 30ರಂದು ದರೋಡೆಗೊಳಗಾದ ಸ್ವಿಫ್ಟ್ ಡಿಸೈರ್ ಕಾರನ್ನು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದ ಗುಡ್ಡ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ . ಮುಂದಿನ ಕಾರ್ಯಾಚರಣೆಯಲ್ಲಿ ಕೇರಳದ ಕಣ್ಣೂರಿನಲ್ಲಿ ಪ್ರಮುಖ ಆರೋಪಿ ನಿಮಿಲ್ ಆರ್.ಕೆ. (37), ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕೃತ್ಯಕ್ಕೆ ಸಹಕರಿಸಿದ್ದ ಇರ್ಷಾದ್ (40) ಹಾಗೂ ಮಡಿಕೇರಿ ಸಮೀಪ ಮುಸ್ತಾಫ (49) ಎಂಬಾತನನ್ನು ಬಂಧಿಸಲಾಯಿತು. ಆರೋಪಿಗಳು ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಒದಗಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳಿದ್ದು, ಅವರಲ್ಲಿ 14 ಮಂದಿ ನೇರವಾಗಿ ಡಕಾಯಿತಿಯಲ್ಲಿ ಭಾಗಿಯಾಗಿದ್ದರೆ, ಇಬ್ಬರು ಸಹಕರಿಸಿದ್ದಾರೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಈವರೆಗೆ ದರೋಡೆಗೊಳಗಾದ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಇನ್ನೋವಾ ಕ್ರಿಸ್ಟಾ ಕಾರು ವಶಪಡಿಸಿಕೊಳ್ಳಲಾಗಿದೆ. ಆದರೆ 180 ಗ್ರಾಂ ಚಿನ್ನಾಭರಣ, ಎರಡು ಮೊಬೈಲ್ ಫೋನ್‌ಗಳು ಹಾಗೂ ಉಳಿದ ಮೂರು ಕಾರುಗಳ ಪತ್ತೆ ಇನ್ನೂ ಬಾಕಿಯಿದೆ.

ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಹಾಗೂ ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣೆ, ಸಿಸಿಬಿ ಹಾಗೂ ವಿವಿಧ ಠಾಣೆಗಳ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದ್ದು, ಉಳಿದ ಆರೋಪಿಗಳ ಬಂಧನ ಮತ್ತು ಸೊತ್ತುಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular