ಮಂಗಳೂರು : ಮದೆನಾಡು ಕರ್ತೋಜಿ ಎಂಬಲ್ಲಿ ಭೂಕುಸಿತ ಉಂಟಾಗಿದ್ದು, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ನೂರಾರು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿವೆ. ಮಣ್ಣು ತೆರವು ಮಾಡಲು ಮಣ್ಣು ತೆಗೆಯುವ ಯಂತ್ರಗಳನ್ನು ಅಳವಡಿಸಲಾಗಿದೆ. ತಹಶೀಲ್ದಾರ್ ಕಿರಣ ಗೌರಯ್ಯ ಮಾತನಾಡಿ, ರಸ್ತೆಯಲ್ಲಿನ ಮಣ್ಣು ತೆರವು ಮಾಡಿದ ನಂತರವೇ ವಾಹನಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಪರೀಕ್ಷೆ ಮುಂದೂಡಿಕೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳವಾರ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸಂಯೋಜಿತ ಕಾಲೇಜುಗಳಲ್ಲಿ ಯುಜಿ ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ ರಾಜು ಕೃಷ್ಣ ಚಲನ್ನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಜುಲೈ 25 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


