ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ (MDMA) ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹16.40 ಲಕ್ಷ ಎಂದು ಅಂದಾಜಿಸಲಾಗಿದೆ.
ಮೊದಲ ಪ್ರಕರಣದಲ್ಲಿ, ಹೊಯಿಗೆ ಬಜಾರ್ ಪ್ರದೇಶದಲ್ಲಿರುವ ಮನೆಯಿಂದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್-ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು ₹10.40 ಲಕ್ಷವಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡನೇ ಪ್ರಕರಣದಲ್ಲಿ, ಪದವಿನಂಗಡಿ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಧನರಾಜ್ ಪೂಜಾರಿ @ ಧನು ವಳಚಿಲ್ (33) ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ 60 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್-ಲಾಕ್ ಕವರ್ಗಳು ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು ₹6 ಲಕ್ಷ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಆರೋಪಿಗಳ ವಿರುದ್ಧವೂ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ, ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.
ಡ್ರಗ್ ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ. ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.


