ಮಂಗಳೂರು : ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದಲೇ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕರೆದೊಯ್ದಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಹತ್ವದ ಪ್ರಕಟಣೆ ನೀಡಿದ್ದಾರೆ.
ಕಾಲೇಜು ಆವರಣದಲ್ಲಿ ಹಲವು ವ್ಯಕ್ತಿಗಳು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ದು ವಾಹನಕ್ಕೆ ಹತ್ತಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯನ್ನು ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, ಯುವತಿಯನ್ನು ಆಕೆಯ ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದ್ದು, ಇಂತಹ ಕೃತ್ಯ ಕಾನೂನಿನ ಪ್ರಕಾರ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಆಕೆಯ ಸ್ವತಂತ್ರ ನಿರ್ಧಾರಕ್ಕೆ ಗೌರವ ನೀಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನವು ದೂರ ಹೋಗುವ ಮೊದಲೇ ತಡೆದು ನಿಲ್ಲಿಸಲು ಸಾಧ್ಯವಾಗುತ್ತಿತ್ತು ಎಂದು ಪೊಲೀಸ್ ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಯಸ್ಕ ಯುವತಿಯ ಸ್ವಾತಂತ್ರ್ಯ ಮತ್ತು ಹಕ್ಕುಗಳ ರಕ್ಷಣೆಗೆ ಕಾನೂನು ಬದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಪೊಲೀಸ್ ಆಯುಕ್ತರ ಪ್ರಕಟಣೆ ಸಾರಿದೆ.

