ಮಡಿಕೇರಿ : ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಾಣಂಗಾಲದಲ್ಲಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ದಂಪತಿ ಹಾಗೂ ಅವರ ನಾಲ್ಕು ವರ್ಷದ ಪುತ್ರಿ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ಪುತ್ರಿ ಲಿಯಾ (4) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ ಎನ್ನಲಾಗಿದೆ.
ಬುಧವಾರ ಬೆಳಗ್ಗೆ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಮುಳುಗಿರುವುದನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದವರು ಕಾರನ್ನು ಪತ್ತೆಹಚ್ಚಿ ಪರಿಶೀಲಿಸಿದಾಗ ಅದರೊಳಗೆ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.

