ಮೈಸೂರು : ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 30 ವರ್ಷದ ಗೃಹಿಣಿಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತೆಯ ಪೋಷಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.
ಮೃತರನ್ನು ಸಂಧ್ಯಾ (30) ಎಂದು ಗುರುತಿಸಲಾಗಿದೆ. ಅವರು ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿಯಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನ ಜವರೇಗೌಡ ಪಾರ್ಕ್ ಸಮೀಪದ ನಿವಾಸದಲ್ಲಿ ಸಂಧ್ಯಾ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂಧ್ಯಾ ಅವರನ್ನು ಟೀಕೆ ಲೇಔಟ್‌ನ ಮಹದೇವ್ ಅವರ ಪುತ್ರ ಅಕ್ಷಯ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಾಂಪತ್ಯ ಜೀವನದಲ್ಲಿ ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದು, ಇದೇ ವಿಚಾರವಾಗಿ ಹಲವು ಬಾರಿ ಗಲಾಟೆಗಳು ನಡೆದಿದ್ದವು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಧ್ಯಾ ಅವರ ಪೋಷಕರು, ತಮ್ಮ ಪುತ್ರಿಯ ಸಾವಿಗೆ ಪತಿಯೇ ಕಾರಣ ಎಂದು ಆರೋಪಿಸಿ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

