ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. 35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದರು.
479 ಡೆಂಗ್ಯೂ ಸಕ್ರಿಯ ಪ್ರಕರಣಗಳು: ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹೆಚ್ಚಾಗದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ಡ್ರೈ ಡೇಯನ್ನ ಆಚರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.
ಮನೆ ಬಳಿ ನೀರು ಸಂಗ್ರಹ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದ್ದು, ಪ್ರತಿ ದಿನ ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಡೆಂಗ್ಯೂಗೆ ಕಳೆದ ಸೋಮವಾರ ಹುಣಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂನಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.